
ಬೆಳಗಾವಿ, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಅವರು ಬೆಳಗಾವಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯ ಗೆ ಭೇಟಿ ನೀಡಿ, ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಸಂಶೋಧನಾ ಚಟುವಟಿಕೆಗಳ ಕುರಿತು ಸಮಗ್ರ ಅವಲೋಕನ ನಡೆಸಿದರು.
ಭೇಟಿಯ ವೇಳೆ ಸಚಿವರು ವಿಶ್ವವಿದ್ಯಾಲಯದ ಅತ್ಯಾಧುನಿಕ ಪ್ರಯೋಗಾಲಯಗಳು, ಸಂಶೋಧನಾ ವಿಭಾಗಗಳು ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಪರಿಶೀಲಿಸಿ, ಅವುಗಳ ಕಾರ್ಯಪದ್ಧತಿ ಹಾಗೂ ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಅವಕಾಶಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಸೃಜನಾತ್ಮಕತೆ ಮತ್ತು ನವೀನ ಆವಿಷ್ಕಾರಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಿದರು.
ಈ ಸಂದರ್ಭದಲ್ಲಿ, ರಾಜ್ಯದ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಅಗತ್ಯವಿದೆ ಎಂದು ಸಚಿವರು ತಿಳಿಸಿದರು. ಶಿಕ್ಷಣದಲ್ಲಿ ತಂತ್ರಜ್ಞಾನ ಬಳಕೆ, ಸಂಶೋಧನೆಗೆ ಉತ್ತೇಜನ ಮತ್ತು ಕೈಗಾರಿಕಾ ಸಂಪರ್ಕ ಬಲಪಡಿಸುವ ಕುರಿತು ಸಿಬ್ಬಂದಿಯೊಂದಿಗೆ ಫಲಪ್ರದ ಸಂವಾದ ನಡೆಸಿದರು.
ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಅಧ್ಯಾಪಕರೊಂದಿಗೆ ನಡೆದ ಚರ್ಚೆಯಲ್ಲಿ, ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ಮತ್ತು ಜಾಗತಿಕ ಮಟ್ಟದ ಸ್ಪರ್ಧಾತ್ಮಕತೆಗೆ ತಕ್ಕ ಶಿಕ್ಷಣ ನೀಡುವತ್ತ ಹೊಸ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa