ಬಡತನ ಸಾಧನೆಗೆ ಅಡ್ಡಿಯಲ್ಲ : ಸಚಿವ ಎಚ್.ಕೆ. ಪಾಟೀಲ
ಗದಗ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಗದಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದ ಹಿನ್ನೆಲೆ, ಜಿಲ್ಲೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗರದಲ್ಲಿನ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಭಾನುವಾರ ಸನ್ಮಾನ ಕಾರ್ಯಕ್ರಮ
ಫೋಟೋ


ಗದಗ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಗದಗ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದ ಹಿನ್ನೆಲೆ, ಜಿಲ್ಲೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗರದಲ್ಲಿನ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಭಾನುವಾರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯದ ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಅವರು ಸಾಧಕರನ್ನು ಸನ್ಮಾನಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಚ್ ಕೆ ಪಾಟೀಲರು, “ವಿದ್ಯಾರ್ಜನೆಗೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಗದಗ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆಯೇ ಸ್ಪಷ್ಟ ಉದಾಹರಣೆ. ಬಡತನವನ್ನು ನೆಪ ಮಾಡದೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದಲ್ಲಿ ಮುನ್ನಡೆಯಬೇಕು,” ಎಂದು ಹೇಳಿದರು.

ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವುದನ್ನು ಉಲ್ಲೇಖಿಸಿದ ಅವರು, ಅದರ ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು. ಗದಗ ಜಿಲ್ಲೆಯ ಮಕ್ಕಳು ಶೈಕ್ಷಣಿಕವಾಗಿ ಇನ್ನಷ್ಟು ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದು ಆಶಿಸಿದರು.

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪಾಲಕರು ನಿರ್ಲಕ್ಷ್ಯ ತೋರಬಾರದು. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಜಿಲ್ಲೆಯ ಒಟ್ಟು ಫಲಿತಾಂಶ ಸುಧಾರಣೆಗೆ ಶ್ರಮಿಸಿದ ಜಿಲ್ಲಾಡಳಿತ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕ ವೃಂದಕ್ಕೆ ಸಚಿವ ಎಚ್ ಕೆ ಪಾಟೀಲರು ಅಭಿನಂದನೆ ಸಲ್ಲಿಸಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಪಾರೂಕ್ ಹುಬ್ಬಳ್ಳಿ, ಬಸವರಾಜ ಕಡೇಮನಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಶರಣು ಗೊಗೇರಿ, ನಡುವಿನಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande