
ವಿಜಯಪುರ, 27 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಇಂದು ಜಿಲ್ಲಾ ಪಂಚಾಯಿತಿಯ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಮಹತ್ವದ ಸಭೆ ಜರುಗಿತು.
ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ ಮತ್ತು ಪಂ.ರಾ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಬ್ಬಂದಿಯವರು ಭಾಗವಹಿಸಿದರು.
ಸಭೆಯಲ್ಲಿ ಕುಡಿಯುವ ನೀರು ನಿರ್ವಹಣೆ, ಜಲಧಾರೆ ಯೋಜನೆ-1 ಮತ್ತು 2, ಇ-ಸ್ವತ್ತು ಸಕಾಲ ಅರ್ಜಿಗಳ ಬಾಕಿ, ಹಕ್ಕುಪತ್ರ ವಿತರಣೆ ಪ್ರಗತಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳ ಪೂರ್ಣಗೊಳಿಕೆ, ಕೂಲಿಕಾರರ ಭಾಗವಹಿಸುವಿಕೆ, ಮಾನವ ದಿನಗಳ ಸೃಜನೆ, ಕೂಲಿಕಾರರ ಇ-ಕೆವೈಸಿ, ತೆರಿಗೆ ಸಂಗ್ರಹಣೆಯ ಪ್ರಗತಿ, ಇ-ಹಾಜರಾತಿ ವ್ಯವಸ್ಥೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಪ್ರಗತಿ ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಕುರಿತು ವಿವರವಾದ ಚರ್ಚೆ ನಡೆಯಿತು.
ಇದಲ್ಲದೆ, ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರು ಹಾಗೂ ಕಾರ್ಮಿಕರು ರಕ್ಷಿಸಿಕೊಳ್ಳಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಂಜಯ ಕೋಟೆನ್ನವರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಸೇರಿದಂತೆ ವಿವಿಧ ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಗತಿ ಪರಿಶೀಲನೆ ಜೊತೆಗೆ ಬಾಕಿ ಇರುವ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಲಾಯಿತು
ಹಿಂದೂಸ್ತಾನ್ ಸಮಾಚಾರ್ / jyothi deshpande