ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ
ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿಗಳ ಸೂಚನೆ
ಮಾದಕ ವಸ್ತುಗಳ ಸಾಗಾಟ ಮತ್ತು ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳ ಸಭೆ ನಡೆಸಿದರು.


ಕೋಲಾರ, ೨೭ ಏಪ್ರಿಲ್ (ಹಿ.ಸ) :

ಆ್ಯಂಕರ್ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಸಂಬ0ಧಪಟ್ಟ ಇಲಾಖೆಗಳು ಜಂಟಿಯಾಗಿ ಕಾರ್ಯಪ್ರವೃತ್ತರಾಗಬೇಕು. ಮಾದಕ ದ್ರವ್ಯ ವ್ಯಸನದ ವಿರುದ್ಧ ‘ಜೀರೋ ಟಾಲರೆನ್ಸ್’ ನೀತಿಯನ್ನು ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತರಕಾರಿ ಮತ್ತು ಕೃಷಿ ಉತ್ಪನ್ನಗಳ ನೆಪದಲ್ಲಿ ಲಾರಿ ಹಾಗೂ ಇತರೆ ವಾಹನಗಳಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಿದ್ದು, ಇಂತಹ ವಾಹನಗಳ ಮೇಲೆ ತೀವ್ರ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು.

ಸಾರಿಗೆದಾರರು, ಚಾಲಕರು ಮತ್ತು ವರ್ತಕರಿಗೆ ಮಾದಕ ವಸ್ತುಗಳ ಸಾಗಾಟದ ಗಂಭೀರತೆಯ ಬಗ್ಗೆ ಅರಿವು ಮೂಡಿಸಬೇಕು. ಉದ್ದೇಶಪೂರ್ವಕವಾಗಿ ಅಥವಾ ಅರಿವಿಲ್ಲದೆ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದಲ್ಲಿ ಪದೇ ಪದೇ ಭಾಗಿಯಾಗುವ ಕಳ್ಳಸಾಗಣೆದಾರರ ಮೇಲೆ ‘ಗುಂಡಾ ಕಾಯ್ದೆ’ಯಡಿ ಪ್ರಕರಣಗಳನ್ನು ದಾಖಲಿಸಲು ಮುಂದಾಗುವ0ತೆ ಅಧಿಕಾರಿಗಳಿಗೆ ಸೂಚಿಸಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಮತ್ತು ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ಮಾದಕ ದ್ರವ್ಯಗಳ ಹಾವಳಿ ಪತ್ತೆಹಚ್ಚಲು ಸಮೀಕ್ಷೆ ನಡೆಸಬೇಕು. ಕಾರ್ಮಿಕ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಮಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಮಾದಕ ವಸ್ತುಗಳಿಗೆ ದಾಸರಾದವರಿಗೆ ಚಿಕಿತ್ಸೆ ಮತ್ತು ಪುನರ್ವಸತಿ ಕಲ್ಪಿಸಲು ಜಿಲ್ಲೆಯಲ್ಲಿರುವ ಡ್ರಗ್ ಡಿ-ಅಡಿಕ್ಷನ್ ಸೆಂಟರ್ಗಳ ಸಹಕಾರ ಪಡೆದುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ. ಕೆ. ರಮೇಶ್, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಷು ರಜಪೂತ್, ಉಪವಿಭಾಗಾಧಿಕಾರಿ ಜಂಬಗಿ ರೇಣುಕಾಪ್ರಸಾದ್ ದಿಲೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಕಾರ್ಮಿಕ ಇಲಾಖೆಯ ವರಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande