ಸಮಾಜಮುಖಿಯಾಗಲು ಯುವಕರಿಗೆ ಜಿಲ್ಲಾಧಿಕಾರಿ ಕರೆ
ದಾವಣಗೆರೆ, 27 ಏಪ್ರಿಲ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆ ಶೇ. 94.64ರಷ್ಟು ಫಲಿತಾಂಶ ದಾಖಲಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿನಂದನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಸಮ
Honour


ದಾವಣಗೆರೆ, 27 ಏಪ್ರಿಲ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆ ಶೇ. 94.64ರಷ್ಟು ಫಲಿತಾಂಶ ದಾಖಲಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿನಂದನೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅತ್ಯಧಿಕ ಅಂಕಗಳೊಂದಿಗೆ ಉತ್ತೀರ್ಣರಾದ 10 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇವಲ ಅಂಕಗಳ ಹಿಂದೆ ಓಡದೆ ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ವೃತ್ತಿಗಳತ್ತ ಆಸಕ್ತಿ ಇರುವುದು ಉತ್ತಮವಾದರೂ, ಎಲ್ಲರಿಗೂ ಆ ಅವಕಾಶ ಸಿಗುವುದು ಕಷ್ಟವಾಗಬಹುದು. ಆದ್ದರಿಂದ ಪರ್ಯಾಯ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳು ಪುಸ್ತಕ ಜ್ಞಾನಕ್ಕೆ ಸೀಮಿತರಾಗದೆ ಜೀವನದ ವಿವಿಧ ಕ್ಷೇತ್ರಗಳ ಅರಿವು ಹೊಂದಿರಬೇಕು. ಮನೆಯ ಹಿರಿಯರನ್ನು ಗೌರವಿಸುವುದು, ಕುಟುಂಬದ ಜವಾಬ್ದಾರಿಗಳಲ್ಲಿ ಭಾಗವಹಿಸುವುದು ಹಾಗೂ ಸಮಾಜದೊಂದಿಗೆ ಬೆರೆತು ಬದುಕುವ ಗುಣ ಬೆಳೆಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.

ಮೊಬೈಲ್, ವಾಟ್ಸಪ್, ಫೇಸ್ಬುಕ್ ಗೀಳಿನಿಂದ ದೂರವಿದ್ದು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಕಲಿಕೆಯೊಂದಿಗೆ ಕ್ರೀಡೆ, ವಿಜ್ಞಾನ, ಸಂಗೀತ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಬಾರಿ ಜಿಲ್ಲೆಯಲ್ಲಿ 19,823 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 18,760 ಮಂದಿ ಉತ್ತೀರ್ಣರಾಗಿದ್ದಾರೆ. ಒಟ್ಟು 181 ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿದ್ದು, ಚನ್ನಗಿರಿ ತಾಲ್ಲೂಕು ಶೇ.99.10ರೊಂದಿಗೆ ಮುಂಚೂಣಿಯಲ್ಲಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಮೇ 18ರಂದು ಪೂರಕ ಪರೀಕ್ಷೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೇ ಮಾಧವ ವಿಠ್ಠಲರಾವ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande