
ವಿಜಯಪುರ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಗೆ ವಿರೋಧ ವ್ಯಕ್ತಪಡಿಸಿ ವಿಜಯಪುರ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಸಂಘದ ಮುಖಂಡರು, ಸಿಇಟಿ ಪರೀಕ್ಷೆಯ ಸಮಯದಲ್ಲಿ ಭದ್ರತಾ ಪರಿಶೀಲನೆ ಹೆಸರಿನಲ್ಲಿ ಕೆಲ ವಿದ್ಯಾರ್ಥಿಗಳಿಂದ ಧಾರ್ಮಿಕ ಆಚರಣೆಯ ಭಾಗವಾದ ಜನಿವಾರವನ್ನು ತೆಗೆಸಿರುವುದು ಬ್ರಾಹ್ಮಣ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಕ್ರಮಗಳು ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಗೂ ಹಾನಿ ಉಂಟುಮಾಡುತ್ತವೆ ಎಂದು ಅವರು ಹೇಳಿದರು.
ಇದೇ ರೀತಿಯ ಘಟನೆ 2025ರಲ್ಲಿಯೂ ನಡೆದಿದ್ದು, ಆಗಲೂ ಅಧಿಕಾರಿಗಳು ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ್ದರು. ಆ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಕಾರಣ ಈ ವರ್ಷ ಮತ್ತೆ ಅದೇ ಘಟನೆ ಮರುಕಳಿಸಿರುವುದು ಆಡಳಿತದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಜೊತೆಗೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದವರು “ಧಾರ್ಮಿಕ ನಂಬಿಕೆಗಳಿಗೆ ಗೌರವ ಕೊಡಬೇಕು”, “ವಿದ್ಯಾರ್ಥಿಗಳ ಹಕ್ಕುಗಳನ್ನು ಕಾಪಾಡಬೇಕು” ಎಂಬ ಘೋಷಣೆಗಳನ್ನು ಹಾಕಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ವಿವಿಧ ಬ್ರಾಹ್ಮಣ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಸಮಸ್ಯೆಗೆ ಶೀಘ್ರ ಪರಿಹಾರ ದೊರಕಬೇಕು ಎಂದು ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande