
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಸ್ಥಿರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, “ಸಿದ್ದರಾಮಯ್ಯನವರು 15 ದಿನಗಳ ಸರದಾರ (ಪಂದ್ರಹ ದಿನ್ ಕಾ ಸುಲ್ತಾನ್)” ಎಂದು ವಿವಾದಾತ್ಮಕ ಹೇಳಿಕೆ ನೀಡಿದರು.
ಬಾಗಲಕೋಟೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರದ ಒಳಗಿನ ಕುರ್ಚಿ ಕಿತ್ತಾಟದಿಂದ ಆಡಳಿತವೇ ಕುಸಿದಂತಾಗಿದೆ ಎಂದು ಆರೋಪಿಸಿದರು. ವಿಧಾನಸೌಧದಲ್ಲಿ ಪರಿಣಾಮಕಾರಿ ಆಡಳಿತ ನಡೆಯುತ್ತಿಲ್ಲ ಎಂದು ಟೀಕಿಸಿದರು.
“ನಾಲ್ಕನೇ ತಾರೀಖು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅದೇ ದಿನ ದಾವಣಗೆರೆ ಹಾಗೂ ಬಾಗಲಕೋಟೆ ಸಂಬಂಧಿತ ಫಲಿತಾಂಶಗಳ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ಫಲಿತಾಂಶವೂ ನಿರ್ಧಾರವಾಗಲಿದೆ” ಎಂದು ಹೇಳಿದರು.
ಸದ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಕಾರಜೋಳ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಗಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿ, “ಸಿದ್ದರಾಮಯ್ಯ ಅವರ ಪರವಾಗಿ ಸುಮಾರು 40 ಶಾಸಕರು ಹೈಕಮಾಂಡ್ ಬಳಿ ಲಾಬಿ ನಡೆಸುತ್ತಿದ್ದರೆ, ಡಿ.ಕೆ. ಶಿವಕುಮಾರ್ ಪರವಾಗಿ 50 ಶಾಸಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ” ಎಂದು ತಿಳಿಸಿದರು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಗಂಭೀರವಾಗಿದ್ದು, ಸಮರ್ಪಕ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಸರ್ಕಾರ ರಾಜಕೀಯ ಗೊಂದಲಗಳನ್ನು ಬದಿಗಿಟ್ಟು ಜನರ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ಅವರು ಆಗ್ರಹಿಸಿದರು.
“ವಿಧಾನಸೌಧದಲ್ಲಿ ಕುಳಿತು ಆಡಳಿತ ನಡೆಸಿ, ಯಾವ ಯಾವ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬುದನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಕನಿಷ್ಠ ಪ್ರತಿ ಜಿಲ್ಲೆಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಬೇಕು” ಎಂದು ಕಾರಜೋಳ ಒತ್ತಾಯಿಸಿದರು
ರಾಜಕೀಯ ಅಸ್ಥಿರತೆಯ ನಡುವೆಯೂ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವುದು ಸರ್ಕಾರದ ಮುಖ್ಯ ಜವಾಬ್ದಾರಿ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande