
ಬಾಗಲಕೋಟೆ, 28 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನ ಸಭಾ ಉಪ ಚುನಾವಣೆ–2026ರ ಮತ ಎಣಿಕೆ ಕಾರ್ಯವನ್ನು ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುತ್ತದೆ. ಈ ಹಿನ್ನಲೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ಮಂಗಳವಾರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ ಅವರು, ಮತ ಎಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ಹಾಗೂ ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಈಗಾಗಲೇ ಮತ ಎಣಿಕೆ ಕೇಂದ್ರವನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದು, ಮತ ಎಣಿಕೆ ವಿಧಾನ ಹಾಗೂ ನಿಯಮಗಳ ಕುರಿತು ಮಾಹಿತಿ ಪಡೆದುಕೊಂಡರು.
ಹಿಂದೂಸ್ತಾನ್ ಸಮಾಚಾರ್ / jyothi deshpande