ಅಕ್ರಮ ಅಕ್ಕಿ ಸಾಗಾಟ ಪತ್ತೆ: 1280 ಕೆಜಿ ಅಕ್ಕಿ, ಟಾಟಾ ಏಸ್ ವಾಹನ ವಶ; ಪ್ರಕರಣ ದಾಖಲು
ವಿಜಯಪುರ, 29 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸರ್ಕಾರದ ವಿವಿಧ ಯೋಜನೆಗಳಡಿ ಹಂಚಲ್ಪಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಹಸೀಲ್ದಾರ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಪತ್ತೆ ಹಚ್ಚಿದ್ದಾರೆ. ದಾಳಿಯ ವೇಳೆ ಅಕ್ರಮವಾಗಿ
ಅಕ್ಕಿ


ವಿಜಯಪುರ, 29 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸರ್ಕಾರದ ವಿವಿಧ ಯೋಜನೆಗಳಡಿ ಹಂಚಲ್ಪಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಹಸೀಲ್ದಾರ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಪತ್ತೆ ಹಚ್ಚಿದ್ದಾರೆ. ದಾಳಿಯ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1280 ಕೆಜಿ ಅಕ್ಕಿ ಹಾಗೂ ಟಾಟಾ ಏಸ್ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಸಿಂದಗಿ ಪಟ್ಟಣದ ಸೋಂಪುರ ರಸ್ತೆಯಲ್ಲಿ ಟಾಟಾ ಏಸ್ ವಾಹನದ ಮೂಲಕ ಅಕ್ರಮ ಅಕ್ಕಿ ಸಾಗಾಟ ನಡೆಯುತ್ತಿರುವ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದರು. ಪರಿಶೀಲನೆ ವೇಳೆ ವಾಹನದಲ್ಲಿ ದೊಡ್ಡ ಪ್ರಮಾಣದಲ್ಲಿ ಪಡಿತರ ಅಕ್ಕಿ ಸಾಗಾಟವಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಹಾಗೂ ವಾಹನವನ್ನು ವಶಪಡಿಸಿಕೊಂಡು, ವಾಹನ ಮಾಲೀಕರ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಜಂಟಿ ದಾಳಿಯಲ್ಲಿ ಸಿಂದಗಿ ತಹಸೀಲ್ದಾರರಾದ ಕರೆಪ್ಪ ಎಸ್. ಬೆಳ್ಳಿ, ಆಹಾರ ನಿರೀಕ್ಷಕರಾದ ವಿದ್ಯಾ ಹಿಪ್ಪರಗಿ ಹಾಗೂ ಪ್ರಭುಗೌಡ ಬಿರಾದಾರ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು. ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

ಸರ್ಕಾರದ ಪಡಿತರ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಸಾರ್ವಜನಿಕರು ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande