
ವಿಜಯಪುರ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರದಲ್ಲಿ ಮೇ 8ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರಾಜ್ಯಮಟ್ಟದ 4ನೇ ಬೃಹತ್ ರೈತ ಜನಜಾಗೃತಿ ಸಮಾವೇಶವನ್ನು ನಗರದ ದರಬಾರ ಗ್ರೌಂಡ್ನಲ್ಲಿ ಆಯೋಜಿಸಲಾಗುತ್ತಿದೆ ಎಂದು ಸಂಘದ ರಾಜ್ಯ ಗೌರವಾಧ್ಯಕ್ಷ ಶ್ರೀಕಾಂತ್ ಗುರೂಜಿ ತಿಳಿಸಿದರು.
ಈ ಸಮಾವೇಶದಲ್ಲಿ ಸುಮಾರು 10 ರಿಂದ 15 ಸಾವಿರ ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ಮಠಾಧೀಶರು, ರೈತ ಮುಖಂಡರು, ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ. ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಸಮಾವೇಶದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರು ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ವಿಶೇಷ ಸನ್ಮಾನ ಕೂಡಾ ಮಾಡಲಾಗುತ್ತದೆ. ಜಿಲ್ಲೆಯ 13 ತಾಲೂಕುಗಳ ರೈತರು, ಯುವಕರು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸುವಂತೆ ಕರೆ ನೀಡಲಾಗಿದೆ.
ಇದೇ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಾಗರ್ ಮಾತನಾಡಿ, ಆಲಿಮಟ್ಟಿ ಜಲಾಶಯದ ಎತ್ತರವನ್ನು 524.256 ಮೀಟರ್ಗೆ ಹೆಚ್ಚಿಸಿ, ಪೂರಕ ಪುನರ್ವಸತಿ ಮತ್ತು ಪರಿಹಾರ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸುವ ಹೋರಾಟಕ್ಕೂ ಈ ಸಮಾವೇಶದ ಮೂಲಕ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ರೈತ ಮುಖಂಡರು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande