
ನವದೆಹಲಿ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ, ಇರಾನ್ ನಲ್ಲಿ ಸಿಲುಕಿದ್ದ 345 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ಚೆನ್ನೈಗೆ ಕರೆತರಲಾಗಿದೆ.
ಈ ರಕ್ಷಣಾ ಕಾರ್ಯಾಚರಣೆಯನ್ನು ಇರಾನ್ನಿಂದ ಅರ್ಮೇನಿಯಾ ಮೂಲಕ ಸ್ಥಳಾಂತರಿಸುವ ಮೂಲಕ ಯಶಸ್ವಿಯಾಗಿ ನೆರವೇರಿಸಲಾಯಿತು. ಅಲ್ಲಿಂದ ವಿಶೇಷ ವ್ಯವಸ್ಥೆಗಳ ಮೂಲಕ ಅವರನ್ನು ಭಾರತಕ್ಕೆ ಕರೆತರಲಾಗಿದೆ.
ಈ ಕಾರ್ಯಾಚರಣೆಗೆ ಸಹಕಾರ ನೀಡಿದಕ್ಕಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅರ್ಮೇನಿಯಾ ಸರ್ಕಾರ ಮತ್ತು ವಿದೇಶಾಂಗ ಸಚಿವ ಅರಾತ್ ಮಿರ್ಜೋಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಸರ್ಕಾರದ ಮಾಹಿತಿ ಪ್ರಕಾರ, ಇದುವರೆಗೆ 1,200 ಕ್ಕೂ ಹೆಚ್ಚು ಭಾರತೀಯರನ್ನು—ಹೆಚ್ಚಾಗಿ ವಿದ್ಯಾರ್ಥಿಗಳನ್ನು—ಇರಾನ್ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈ ಕಾರ್ಯಾಚರಣೆ ಅಜೆರ್ಬೈಜಾನ್ ಮತ್ತು ಅರ್ಮೇನಿಯಾ ಮಾರ್ಗವಾಗಿ ಮುಂದುವರಿಯುತ್ತಿದೆ. ಭಾರತೀಯ ರಾಯಭಾರ ಕಚೇರಿ ಹಾಗೂ ಸ್ಥಳೀಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಇದರ ನಡುವೆಯೇ, ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ಭಾರತಕ್ಕೆ ಸೀಮಿತ ವಿಮಾನ ಸೇವೆಗಳು ಮುಂದುವರಿದಿದ್ದು, ಹೆಚ್ಚಿನ ಸಂಖ್ಯೆಯ ಭಾರತೀಯರು ತಮ್ಮ ತವರಿನತ್ತ ಮರಳುತ್ತಿದ್ದಾರೆ.
ವರದಿಗಳ ಪ್ರಕಾರ, ಫೆಬ್ರವರಿ ಅಂತ್ಯದಿಂದ ಈ ಪ್ರದೇಶದಿಂದ ಸುಮಾರು 6.24 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಭಾರತಕ್ಕೆ ಮರಳಿದ್ದಾರೆ. ಆದರೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಇನ್ನೂ ಸೂಕ್ಷ್ಮವಾಗಿದ್ದು, ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಲು ಸರ್ಕಾರ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa