
ದಾವಣಗೆರೆ, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ ಶಾಮನೂರು ಪರವಾಗಿ ಸಚಿವ ಈಶ್ವರ ಖಂಡ್ರೆ ಅವರು ಭಾನುವಾರ ನಾಗನೂರು, ಶಿರಾಮಗೊಂಡನಹಳ್ಳಿ ಹಾಗೂ ಹಳೆ ಬಿಸಲೇರಿ ಗ್ರಾಮಗಳಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದರು.
ಪ್ರಚಾರ ವೇಳೆ ಪ್ರತಿ ಗ್ರಾಮದಲ್ಲೂ ಮಹಿಳೆಯರು, ಯುವಕರು ಹಾಗೂ ಹಿರಿಯರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿ ಆತ್ಮೀಯ ಸ್ವಾಗತ ನೀಡಿದರು. ಸ್ಥಳೀಯ ಜನರೊಂದಿಗೆ ನೇರ ಸಂವಾದ ನಡೆಸಿದ ಸಚಿವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಅವರಿಗೆ ಮತ ನೀಡಿ ಗೆಲುವು ಸಾಧಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಲ್ಯಾಣ ಯೋಜನೆಗಳು ಸಾಮಾನ್ಯ ಜನರ ಬದುಕಿನಲ್ಲಿ ಸ್ಪಷ್ಟ ಬದಲಾವಣೆ ತರಲು ಸಹಕಾರಿಯಾಗಿವೆ ಎಂದು ಹೇಳಿದರು. ಗ್ರಾಮಗಳಾದ್ಯಂತ ಜನರಿಂದ ವ್ಯಕ್ತವಾದ ಉತ್ಸಾಹ ಮತ್ತು ಬೆಂಬಲ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನ ಸಂಕೇತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಚಾರ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa