ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಿ : ನಿಸಾರ್ ಅಹ್ಮದ್
ವಿಜಯಪುರ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಅವರಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿ ಜೀವನದಲ್ಲಿ ಸಾಧನೆ ಮಾಡುವಂತೆ ಪ್ರೇರೇಪಿಸುವ ಮೂಲಕ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು ನೀಸಾರ್ ಅಹ್ಮೆದ್ ಅಧಿಕಾರಿ
ಸಭೆ


ವಿಜಯಪುರ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮಕ್ಕಳು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಂಡು, ಅವರಿಗೆ ಶಿಕ್ಷಣದ ಮಹತ್ವವನ್ನು ತಿಳಿಸಿ ಜೀವನದಲ್ಲಿ ಸಾಧನೆ ಮಾಡುವಂತೆ ಪ್ರೇರೇಪಿಸುವ ಮೂಲಕ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು ನೀಸಾರ್ ಅಹ್ಮೆದ್ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳು ಶಾಲೆ ಬಿಟ್ಟು ಹೊರಗುಳಿಯದಂತೆ ಸಂಬಂಧಿಸಿದ ಇಲಾಖೆಗಳು ಹೆಚ್ಚಿನ ಶ್ರಮವಹಿಸಬೇಕು. ಶಾಲೆ ಬಿಟ್ಟ ಮಕ್ಕಳ ಮಾಹಿತಿಯನ್ನು ಸಂಗ್ರಹಿಸಿ ಅವರನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯವನ್ನು ಕೈಗೊಳ್ಳಬೇಕು. ಶಿಕ್ಷಣದ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು ಎಲ್ಲ ಮಕ್ಕಳು ಶಾಲೆಗೆ ಸೇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಯಾರೂ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ನಗರ ಹಾಗೂ ಗ್ರಾಮೀಣ ಭಾಗದ ಅಂಗನವಾಡಿಗಳಲ್ಲಿ ಕಲಿಯುತ್ತಿರುವ ಮಕ್ಕಳ ಮಾಹಿತಿ ದತ್ತಾಂಶವನ್ನು ಸಂಗ್ರಹಿಸಿ ಒದಗಿಸುವಂತೆ ಸೂಚಿಸಿದ ಅವರು, ಶಾಲೆಬಿಟ್ಟ ಮಕ್ಕಳ ಕುರಿತು ಜಾಗೃತಿ ಮೂಡಿಸಲು ವಿವಿಧ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಮಾಹಿತಿ ಹಾಗೂ ತರಬೇತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ವಿವಿಧ ಕೋರ್ಸ್ಗಳ ಮಾಹಿತಿಯನ್ನು ಕಾಲೇಜುಗಳಿಗೆ ಭೇಟಿ ನೀಡಿ ಅಧಿಕಾರಿಗಳು ನೀಡಬೇಕು. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳಿಗೆ ಮನೆ ನಿರ್ಮಾಣ ಸೇರಿದಂತೆ ಸರ್ಕಾರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಾಲ ಸೌಲಭ್ಯಕ್ಕಾಗಿ ಬ್ಯಾಂಕ್ಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ಅನಗತ್ಯವಾಗಿ ಬಾಕಿ ಉಳಿಸದೆ ತಕ್ಷಣ ವಿಲೇವಾರಿ ಮಾಡಬೇಕು. ಅರ್ಜಿದಾರರಿಗೆ ಸಾಲ ಸೌಲಭ್ಯ ಒದಗಿಸಿ ಆರ್ಥಿಕ ಸದೃಢತೆ ಸಾಧಿಸಲು ಸಹಕರಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.

ಸಾಲ ಅರ್ಜಿಗಳಲ್ಲಿ ದಾಖಲಾತಿಗಳು ಅಪೂರ್ಣ ಇದ್ದಲ್ಲಿ ಅರ್ಜಿದಾರರಿಗೆ ಸೂಕ್ತ ಮಾರ್ಗದರ್ಶನ ನೀಡಿ, ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸ್ವಾವಲಂಬಿ ಟ್ಯಾಕ್ಸಿ, ಗೂಡ್ಸ್ ಹಾಗೂ ಆಟೋ ರಿಕ್ಷಾ ಯೋಜನೆಗಳಿಗೆ ಸಲ್ಲಿಸಿರುವ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.

ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳು ಹಾಗೂ ಸೌಲಭ್ಯಗಳು ಫಲಾನುಭವಿಗಳಿಗೆ ಸಕಾಲಕ್ಕೆ ತಲುಪಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಸಾಲ ಸೌಲಭ್ಯಕ್ಕಾಗಿ ಸ್ವೀಕರಿಸಿರುವ ಒಟ್ಟು ಅರ್ಜಿಗಳು, ಬಾಕಿ ಇರುವ ಅರ್ಜಿಗಳು ಹಾಗೂ ಅವುಗಳ ವಿಲೇವಾರಿ ಕುರಿತು ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಡಾ ಆನಂದ ಕೆ ಮಾತನಾಡಿ, ಯಾವುದೇ ಫಲಾನುಭವಿಗಳ ಅರ್ಜಿಗಳು ಬ್ಯಾಂಕ್ಗಳಲ್ಲಿ ಬಾಕಿ ಉಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಉಪವಿಭಾಗಾಧಿಕಾರಿ ಗುರುನಾಥ್ ದೊಡ್ಡಿ, ಮಹಾನಗರ ಪಾಲಿಕೆ ಆಯುಕ್ತೆ ವಿಜಯ್ ಮೆಕ್ಕಳಕಿ, ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande