ಚಿತ್ರದುರ್ಗ ನಗರಸಭೆಗೆ ಡಿಸಿ ಟಿ. ವೆಂಕಟೇಶ್ ದಿಢೀರ್ ಭೇಟಿ: ಇ-ಸ್ವತ್ತು ವಿಳಂಬಕ್ಕೆ ತೀವ್ರ ಅಸಮಾಧಾನ
ಚಿತ್ರದುರ್ಗ, 08 ಏಪ್ರಿಲ್ (ಹಿ.ಸ.): ಆ್ಯಂಕರ್: ಚಿತ್ರದುರ್ಗ ನಗರಸಭೆ ಕಚೇರಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಬುಧವಾರ ಅನಿರೀಕ್ಷಿತ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಿದರು. ಈ ವೇಳೆ ಇ-ಸ್ವತ್ತು ವಿತರಣೆ ಹಾಗೂ ಸಾರ್ವಜನಿಕ ಸೇವೆಗಳ ವಿಳಂಬಕ್ಕೆ ತೀವ್ರ ಅಸಮ
Visit


ಚಿತ್ರದುರ್ಗ, 08 ಏಪ್ರಿಲ್ (ಹಿ.ಸ.):

ಆ್ಯಂಕರ್:

ಚಿತ್ರದುರ್ಗ ನಗರಸಭೆ ಕಚೇರಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಬುಧವಾರ ಅನಿರೀಕ್ಷಿತ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಿದರು. ಈ ವೇಳೆ ಇ-ಸ್ವತ್ತು ವಿತರಣೆ ಹಾಗೂ ಸಾರ್ವಜನಿಕ ಸೇವೆಗಳ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪರಿಶೀಲನೆ ಸಂದರ್ಭದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಇ-ಸ್ವತ್ತು ಅರ್ಜಿಗಳನ್ನು ತಿಂಗಳುಗಟ್ಟಲೆ ಬಾಕಿ ಇಡುವುದು ಸರಿಯಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಪರಿಶೀಲಿಸಿ ವಿತರಿಸಬೇಕು. ತಾಂತ್ರಿಕ ಕಾರಣಗಳನ್ನು ಹೇಳಿ ಸಾರ್ವಜನಿಕರನ್ನು ಅಲೆದಾಡಿಸಬಾರದು. ಯಾವುದೇ ಸಮಸ್ಯೆಗಳಿದ್ದರೆ ತಕ್ಷಣ ಗಮನಕ್ಕೆ ತಂದು ಪರಿಹರಿಸಬೇಕು ಎಂದು ಸೂಚಿಸಿದರು.

ಶಿಸ್ತು ಕ್ರಮದ ಎಚ್ಚರಿಕೆ

ಕಚೇರಿಯ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಬಾಕಿ ಇರುವ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಗಡುವು ನೀಡಿದರು. ಕಂಪ್ಯೂಟರ್ ಹಾಗೂ ಆನ್‌ಲೈನ್ ಸೌಲಭ್ಯಗಳಿದ್ದರೂ ಕೆಲಸಗಳಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಕರ್ತವ್ಯ ಲೋಪ ಎಸಗುವ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ನಗರಸಭೆ ವ್ಯಾಪ್ತಿಯ ಜನತೆಗೆ ಯಾವುದೇ ಅಡೆತಡೆಯಿಲ್ಲದೆ ಸೇವೆಗಳು ದೊರಕುವಂತೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲಾಧಿಕಾರಿಗಳ ದಿಢೀರ್ ಭೇಟಿಯಿಂದ ನಗರಸಭೆ ಕಚೇರಿಯಲ್ಲಿ ಚಟುವಟಿಕೆ ಚುರುಕುಗೊಂಡಿದ್ದು, ಸಾರ್ವಜನಿಕರಿಂದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ಸಂದರ್ಭದಲ್ಲಿ ಪೌರಾಯುಕ್ತೆ ಲಕ್ಷ್ಮೀ, ಕಾರ್ಯಪಾಲಕ ಇಂಜಿನಿಯರ್ ರಾಜು, ಕಂದಾಯ ಅಧಿಕಾರಿ ಪ್ರಕಾಶ್, ಕಚೇರಿ ವ್ಯವಸ್ಥಾಪಕ ಜಯಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande