ಶಿಕ್ಷಣ, ಆರೋಗ್ಯದಿಂದ ಯಾವುದೇ ಮಗು ವಂಚಿತವಾಗಬಾರದು : ಯು. ನಿಸಾರ ಅಹಮದ್
ಗದಗ, 08 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಹಾಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಯು. ನಿಸಾರ ಅಹಮದ್ ಅವರ ಅಧ್ಯಕ್ಷತೆಯಲ್ಲಿಂದು ಜಿಲ್ಲಾಡಳಿತ ಭವನದಲ್ಲಿ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪ್ರಗತಿ ಪರ
ಫೋಟೋ


ಗದಗ, 08 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ಹಾಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಯು. ನಿಸಾರ ಅಹಮದ್ ಅವರ ಅಧ್ಯಕ್ಷತೆಯಲ್ಲಿಂದು ಜಿಲ್ಲಾಡಳಿತ ಭವನದಲ್ಲಿ ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದ ಈ ಸಭೆಯಲ್ಲಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೊಂಡಿರುವ ಯೋಜನೆಗಳ ಅನುಷ್ಠಾನ, ಫಲಾನುಭವಿಗಳಿಗೆ ತಲುಪುವಿಕೆ, ಹಾಗೂ ಕಾರ್ಯಕ್ಷಮತೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಯು. ನಿಸಾರ ಅಹಮದ್ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ಶಿಕ್ಷಣ ಪಡೆದ ಪ್ರತಿಯೊಂದು ಮಗು ಮುಂದಿನ ಹಂತವಾಗಿ ಸರ್ಕಾರಿ ಅಥವಾ ಖಾಸಗಿ ಶಾಲೆಗಳ 1ನೇ ತರಗತಿಗೆ ಸೇರ್ಪಡೆಯಾಗಿರುವುದನ್ನು ಸಂಬಂಧಿತ ಇಲಾಖೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಕಡ್ಡಾಯವಾಗಿ ಸೂಚಿಸಿದರು.

ಮಕ್ಕಳ ಶಿಕ್ಷಣದಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಬಾರದು, ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣದಿಂದ ದೂರವಾಗದಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ, ಪೌಷ್ಠಿಕ ಆಹಾರ, ವಿದ್ಯಾರ್ಥಿವೇತನ, ಆರೋಗ್ಯ ಸೇವೆಗಳು ಸೇರಿದಂತೆ ಸರ್ಕಾರ ನೀಡುವ ಸೌಲಭ್ಯಗಳು ಸಮರ್ಪಕವಾಗಿ ಮಕ್ಕಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಸರ್ಕಾರದ ವಿವಿಧ ಯೋಜನೆಗಳು ಕೇವಲ ಕಾಗದದಲ್ಲಿ ಮಾತ್ರ ಉಳಿಯದೆ, ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದಕ್ಕಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಬಾರದು ಎಂದು ವಿಶೇಷವಾಗಿ ಎಚ್ಚರಿಸಿದರು.

ಗದಗ ಜಿಲ್ಲೆಯು ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಎಲ್ಲ ಸಮುದಾಯಗಳು ಪರಸ್ಪರ ಸಹಕಾರದಿಂದ ಬದುಕುತ್ತಿರುವುದು ರಾಜ್ಯಕ್ಕೆ ಮಾದರಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಪೊಲೀಸ್ ವೃತ್ತಿ ಜೀವನದ ಆರಂಭವನ್ನು ಗದಗ ಜಿಲ್ಲೆಯ ನರಗುಂದದಲ್ಲಿ ಮಾಡಿದುದನ್ನು ಸ್ಮರಿಸಿದ ಅವರು, ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲಿಸಿ, ಕಾರ್ಯನಿರ್ವಹಣೆಯ ಗುಣಮಟ್ಟವನ್ನು ಹೆಚ್ಚಿಸುವುದು, ಗುರಿ ಸಾಧನೆಗೆ ವೇಗ ನೀಡುವುದು, ಹಾಗೂ ಜನಸಾಮಾನ್ಯರಿಗೆ ಹೆಚ್ಚಿನ ಪ್ರಯೋಜನವಾಗುವಂತೆ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಅವರು ಸೂಕ್ತ ಮಾರ್ಗದರ್ಶನ ನೀಡಿದರು.

ಕೊಳಗೇರಿ ಅಭಿವೃದ್ಧಿ ನಿಗಮದಿಂದ ಮನೆ ನಿರ್ಮಿಸಿ ಕೊಟ್ಟ ಮಾಹಿತಿ ನೀಡಿ, ಹಾಗೂ ಕಾರ್ಮಿಕ ಇಲಾಖೆಯಲ್ಲಿ ನೊಂದಣಿ ಇರುವ ಕಾರ್ಮಿಕರ ವಿವರ ಅವರಿಗೆ ನೀಡಿದ ಸೌಲಭ್ಯಗಳ ವಿವರ ನೀಡುವಂತೆ ತಿಳಿಸಿದರು. ಆರೋಗ್ಯ ಇಲಾಖೆಯಿಂದ ವಹಿಸಿದ ಕ್ರಮಗಳ ಮಾಹಿತಿ ಪಡೆದರು.

ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ನೀಡಿದ ಸೌಲಭ್ಯಗಳ ಮಾಹಿತಿಯನ್ನು ಪಡೆದು, ಹೆಚ್ಚು ಹೆಚ್ಚು ಅನುಕೂಲ ಮಾಡುವಂತೆ ತಿಳಿಸಿದರು. ಜರ್ಮನ್ ಸೇರಿದಂತೆ ಇತರೆ ವಿದೇಶಕ್ಕೆ ಕೆಲಸಕ್ಕೆ ಕಳಿಸಲು ಲಿಪ್ಟ್ ತರಬೇತಿ ನೀಡಿ ಕಳುಹಿಸಲು ಸೂಚಿಸಿದರು.

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಮಾತನಾಡಿ ಶಾಲಾ ಕಾಲೇಜು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕರಿಯರ್ ಗೈಡನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಅರ್ಹ ಅಲ್ಪಸಂಖ್ಯಾತ ಫಲಾನುಭವಿಗಳಿಗೆ ವಿವಿಧ ಇಲಾಖೆಗಳಿಂದ ಇರುವ ಸೌಲಭ್ಯಗಳನ್ನು ವಿಳಂಬವಿಲ್ಲದೇ ದೊರಕಿಸುವಲ್ಲಿ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ತಮ್ಮ ಇಲಾಖೆಗಳ ಪ್ರಗತಿ ವಿವರಗಳನ್ನು ಕೆಳಗಿನಂತೆ ವಿವರಿಸಿದರು.

ಶಾಲಾ ಶಿಕ್ಷಣ ಇಲಾಖೆಯಿಂದ ಏಪ್ರಿಲ್ 2025 ರಿಂದ ಮಾರ್ಚ 2026 ರ ಅಂತ್ಯದವರೆಗೆ ಸಮವಸ್ತç ಮತ್ತು ಶೂ ಮತ್ತು ಸಾಕ್ಸ್ ಯೋಜನೆಯಡಿ 14794 ಫಲಾನುಭವಿಗಳು ಸೌಲಭ್ಯ ಪಡೆದಿರುತ್ತಾರೆ. ಅಕ್ಷರ ದಾಸೋಹ ಮತ್ತು ಕ್ಷೀರ ಭಾಗ್ಯ ಯೋಜನೆಯಡಿ 19128 ಫಲಾನುಭವಿಗಳು ಸೌಲಭ್ಯ ಪಡೆದಿರುತ್ತಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿAದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಏಪ್ರಿಲ್ 2025 ರಿಂದ ಮಾರ್ಚ 2026 ರ ಅಂತ್ಯದವರೆಗೆ 5187 ಲಕ್ಷ ರೂ. ವೆಚ್ಚ ಮಾಡಲಾಗಿದ್ದು 798 ಫಲಾನುಭವಿಗಳು ಯೋಜನೆಯ ಸೌಲಭ್ಯ ಪಡೆದಿರುತ್ತಾರೆ. ಪ್ರಸಕ್ತ ಉದ್ಯೋಗ ಮೇಳದಲ್ಲಿ 8 ಜನ ಅಲ್ಪಸಂಖ್ಯಾತರಿಗೆ ಉದ್ಯೋಗ ಪಡೆದಿರುತ್ತಾರೆ ಎಂದು ಸಭೆಗೆ ಮಾಹಿತಿ ತಿಳಿಸಿದರು.

ಸಭೆಯ ಅಂತ್ಯದಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ಸಮನ್ವಯತೆ ಸಾಧಿಸಿ, ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಓಎಸ್ ಡಿ ಚೇರಮಮನ್ ಮುಜಾಬುಲ್ಲಾ ಜಾಫರಿ ಸೇರಿದಂತೆ ವಿವಿಧ ಇಲಾಖೆ ಅದಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande