
ಗದಗ, 08 ಏಪ್ರಿಲ್ (ಹಿ.ಸ.):
ಆ್ಯಂಕರ್: ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈಗಿನಿಂದಲೇ ಪೂರ್ವ ಸಿದ್ಧತೆ ಕೈಗೊಳ್ಳುವುದು ಅತ್ಯಂತ ಅಗತ್ಯ. ಜನರಿಗೆ ಕುಡಿಯುವ ನೀರಿನ ತೊಂದರೆ ಎದುರಾಗುವ ಪರಿಸ್ಥಿತಿ ಬರಬಾರದು” ಎಂದು ರೋಣ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳು ಹೇಳಿದರು..
ಗದಗ ಜಿಲ್ಲೆಯ ರೋಣ ತಾಲೂಕ ಪಂಚಾಯತ ಸಭಾ ಭವನದಲ್ಲಿ ಇಂದು ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಸಿಗೆ ಹಂಗಾಮಿನ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪ್ರಮುಖ ಚರ್ಚೆಯ ವಿಷಯವಾಗಿ ಹೊರಹೊಮ್ಮಿತು. ರೋಣ ಹಾಗೂ ಗಜೇಂದ್ರಗಡ ತಾಲೂಕಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನೀರಿನ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಕ್ಷಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿಗಳು, “ ಹಾಳಾಗಿರುವ ಬೋರ್ವೆಲ್ಗಳನ್ನು ತ್ವರಿತವಾಗಿ ದುರಸ್ತಿ ಮಾಡುವುದು, ಅಗತ್ಯವಿರುವ ಕಡೆಗಳಲ್ಲಿ ಹೊಸ ಬೋರ್ವೆಲ್ಗಳ ತೋಡಿಕೆ, ಕುಡಿಯುವ ನೀರಿನ ಟ್ಯಾಂಕರ್ಗಳನ್ನು ಸಿದ್ಧವಾಗಿಡುವುದು ಹಾಗೂ ನೀರಿನ ಸಂಗ್ರಹಣೆ ಮತ್ತು ವಿತರಣೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಮಟ್ಟದಲ್ಲಿ ನೀರಿನ ಮೂಲಗಳ ಸಮಗ್ರ ಪರಿಶೀಲನೆ ನಡೆಸಿ, ನೀರಿನ ಮಟ್ಟ ಕುಸಿಯುತ್ತಿರುವ ಪ್ರದೇಶಗಳನ್ನು ಗುರುತಿಸಿ ಮುಂಚಿತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು. ನೀರಿನ ಸರಬರಾಜಿನಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಯಿತು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ.ಜಿ.ಎನ್.ಆರ್.ಇ.ಜಿ.ಎ) ಅಡಿಯಲ್ಲಿ ಕ್ರಿಯಾ ಯೋಜನೆ ತಯಾರಿಕೆ ಕುರಿತು ಸಮಗ್ರ ಚರ್ಚೆ ನಡೆಸಿ, ಗ್ರಾಮೀಣ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿಸಲು ಸೂಚಿಸಲಾಯಿತು. ಇನ್ನು ಬೀದಿ ನಾಯಿಗಳ ಹಾವಳಿ ತಡೆಗಟ್ಟುವಿಕೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು ಹಾಗೂ ಈ ಸಂಬಂಧ ಹಣ ಸಂಗ್ರಹಣೆ ಮತ್ತು ವ್ಯವಸ್ಥಿತ ನಿರ್ವಹಣೆ ಕುರಿತು ಚರ್ಚಿಸಲಾಯಿತು.
ಲೈಬ್ರರಿ ಸೆಸ್ನ್ನು ಜಿಲ್ಲಾ ಪಂಚಾಯತ ಖಾತೆಗೆ ಸರಿಯಾಗಿ ಜಮಾ ಮಾಡುವಂತೆ ಸೂಚನೆ ನೀಡಲಾಗಿದ್ದು, ಶೇ.25 ಪ.ಜಾ/ಪ.ಪಂ ಸಮುದಾಯದವರಿಗೆ ಮೀಸಲಾದ ಅನುದಾನದ ಸಮರ್ಪಕ ಬಳಕೆ ಬಗ್ಗೆ ವಿಶೇಷ ಗಮನ ಹರಿಸಲು ತಿಳಿಸಲಾಯಿತು. ಪಂಚತಂತ್ರ 2.0 ಯೋಜನೆಯ ವಾರ್ಷಿಕ ಮುಕ್ತಾಯದ ಹಿನ್ನಲೆಯಲ್ಲಿ ಪ್ರಗತಿ ವರದಿಗಳನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಯಿತು.
ಮುಖ್ಯವಾಗಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ರ ದತ್ತಾಂಶ ವರದಿ ಅಂತಿಮಗೊಳಿಸುವ ಕುರಿತು ಮಾತನಾಡಿದ ಸಭೆಯಲ್ಲಿ ತಾಲ್ಲೂಕು ಮಟ್ಟದ ಮೇಲ್ವಿಚಾರಣಾ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ವಿವಿಧ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪಿಡಿಓ ಉಪಸ್ಥಿತರಿದ್ದು, ವರದಿ ತಯಾರಿಕೆಗೆ ಸಂಬಂಧಿಸಿದ ದತ್ತಾಂಶಗಳ ಪರಿಶೀಲನೆ ಮತ್ತು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು.
ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದ ಮೇಲೆ ತಾಲ್ಲೂಕಿನ ಅಭಿವೃದ್ಧಿ ಮಟ್ಟವನ್ನು ಸಮಗ್ರವಾಗಿ ಅಳೆಯುವ ಜೊತೆಗೆ, 2031ರ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ಅಗತ್ಯವಾದ ಕ್ರಮಗಳ ಕುರಿತು ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ಸಭೆ ಅಂತ್ಯದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ನಿಖರ ಹಾಗೂ ಸಂಪೂರ್ಣ ದತ್ತಾಂಶ ಒದಗಿಸಲು ಸೂಚನೆ ನೀಡಲಾಯಿತು.
ಈ ಸಭೆಯಲ್ಲಿ ತಾಲೂಕ ಪಂಚಾಯತಿಯ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ ಆಡಳಿತಾಧಿಕಾರಿಗಳು, ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP