
ಬಾಗಲಕೋಟೆ, 01 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ನಿರಂತರವಾಗಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಸರ್ಕಾರ ಈ ವಿಷಯದಲ್ಲಿ ಗಂಭೀರ ಮನೋಭಾವವನ್ನು ತಾಳಬೇಕು ಎಂದು ಒತ್ತಾಯಿಸಿದರು.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಿಂದಲೂ ಆಡಳಿತ ನಡೆಸಿದ ಅನೇಕ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ತಕ್ಕ ಮಟ್ಟಿನ ಪ್ರಾಮುಖ್ಯತೆ ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಶಿಕ್ಷಣದ ಮಹತ್ವವನ್ನು ಅರ್ಥಮಾಡಿಕೊಳ್ಳದವರನ್ನೇ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡುವ ಪ್ರವೃತ್ತಿ ಮುಂದುವರಿದಿರುವುದು ದುರ್ಭಾಗ್ಯಕರ ಎಂದರು.
ಶಿಕ್ಷಕರಿಗೆ ಪಾಠ ಬೋಧನೆಗೆ ಬದಲಾಗಿ ಇತರ ಆಡಳಿತಾತ್ಮಕ ಹಾಗೂ ವಿವಿಧ ಕಾರ್ಯಗಳನ್ನು ಹೇರಲಾಗುತ್ತಿದೆ. ಇದರಿಂದ ಶಿಕ್ಷಕರು ತಮ್ಮ ಮೂಲ ಕರ್ತವ್ಯವಾದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಮಯ ಹಾಗೂ ಗಮನ ನೀಡಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಕುಸಿಯುವ ಅಪಾಯ ಎದುರಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ, ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಲೆಗಳ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ, ತರಬೇತಿ ಹಾಗೂ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸಮಗ್ರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ರಾಜ್ಯದ ಭವಿಷ್ಯ ವಿದ್ಯಾರ್ಥಿಗಳ ಮೇಲೆ ಅವಲಂಬಿತವಾಗಿದ್ದು, ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿ ಎಂಬುದನ್ನು ಮರೆಯಬಾರದು ಎಂದು ಬಸವರಾಜ ಹೊರಟ್ಟಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande