
ಬೆಂಗಳೂರು, 10 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್ ಅವರು ಭಾನುವಾರ ಮುಂಜಾನೆ ನಿಧನರಾದರು.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 3:15ಕ್ಕೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೊಣಕಾಲಿನ ಶಸ್ತ್ರಚಿಕಿತ್ಸೆಗಾಗಿ ಮೊದಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಸುಧಾಕರ್ ಅವರಿಗೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ಅವರನ್ನು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಡಿ. ಸುಧಾಕರ್ ಅವರು ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು. ವಿವಿಧ ಅವಧಿಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರು ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ ಗೆದ್ದಿದ್ದರು. ಜಿಲ್ಲೆಯ ರಸ್ತೆ, ನೀರಾವರಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa