
ವಿಜಯಪುರ, 11 ಮೇ (ಹಿ.ಸ.) :
ಆಂಕರ್ : ಮಹಿಳೆಯರ ಮೇಲಿನ ದೌರ್ಜನ್ಯ ತಡೆ, ಸಾಮಾಜಿಕ ಜಾಲತಾಣಗಳಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ವಿವಿಧ ಸಹಾಯವಾಣಿ ಸಂಖ್ಯೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಕ ಪಡೆ ವತಿಯಿಂದ ವಿಜಯಪುರದ ಗ್ಲೋಬಲ್ ಕಾಲೇಜಿಗೆ ಭೇಟಿ ನೀಡಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳಿಗೆ ಮಹಿಳೆಯರ ಮೇಲಿನ ದೌರ್ಜನ್ಯ, ಕಿರುಕುಳ, ಸೈಬರ್ ಅಪರಾಧಗಳು, ಸಾಮಾಜಿಕ ಜಾಲತಾಣಗಳ ದುರುಪಯೋಗದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಯುವಜನರು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚು ಒಳಗಾಗುತ್ತಿರುವ ಹಿನ್ನೆಲೆಯಲ್ಲಿ, ಅವುಗಳನ್ನು ಜವಾಬ್ದಾರಿಯಿಂದ ಬಳಸುವ ಅಗತ್ಯವಿದೆ ಎಂದು ಅಧಿಕಾರಿಗಳು ಸಲಹೆ ನೀಡಿದರು.
ಅಲ್ಲದೆ, ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು, ನಕಲಿ ಖಾತೆಗಳು ಹಾಗೂ ಸೈಬರ್ ಮೋಸಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು. ಮಹಿಳೆಯರ ಸುರಕ್ಷತೆಗಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮತ್ತು ಕಾನೂನುಗಳ ಕುರಿತು ಸಹ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ 181 ಮಹಿಳಾ ಸಹಾಯವಾಣಿ, 1098 ಮಕ್ಕಳ ಸಹಾಯವಾಣಿ ಹಾಗೂ 112 ತುರ್ತು ಸೇವೆ ಸಹಾಯವಾಣಿ ಸಂಖ್ಯೆಗಳ ಮಹತ್ವವನ್ನು ವಿವರಿಸಿ, ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ಈ ಸೇವೆಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಲಾಯಿತು.
ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸಿ ವಿವಿಧ ಪ್ರಶ್ನೆಗಳು ಕೇಳಿ ಮಾಹಿತಿ ಪಡೆದುಕೊಂಡರು. ಇಂತಹ ಜಾಗೃತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಸಮಾಜದಲ್ಲಿ ಸುರಕ್ಷತೆ ಮತ್ತು ಜವಾಬ್ದಾರಿತನ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಕಾಲೇಜು ಆಡಳಿತ ಮಂಡಳಿ ಅಭಿಪ್ರಾಯಪಟ್ಟಿತು.
ಈ ಸಂದರ್ಭದಲ್ಲಿ ಅಕ್ಕ ಪಡೆ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande