ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಜೀವಂತಿಕೆಗೆ ಶತಮಾನದ ಸೇವೆ
ಗದಗ, 11 ಮೇ (ಹಿ.ಸ.) : ಆ್ಯಂಕರ್ : ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಏಳಿಗೆಯ ಉದ್ದೇಶದೊಂದಿಗೆ ಸಾಹಿತ್ಯ, ಹೋರಾಟ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡ ಭಾಷೆಯ ಅಧ್ಯಯನವನ್ನು ಜೀವಂತವಾಗಿಡುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಶತಮಾನದಿಂದ ನಿರಂತರವಾಗಿ ಮಾಡುತ್ತ ಬಂದಿದೆ ಎಂದು ನ್ಯಾಯವ
ಫೋಟೋ


ಗದಗ, 11 ಮೇ (ಹಿ.ಸ.) :

ಆ್ಯಂಕರ್ : ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಏಳಿಗೆಯ ಉದ್ದೇಶದೊಂದಿಗೆ ಸಾಹಿತ್ಯ, ಹೋರಾಟ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕನ್ನಡ ಭಾಷೆಯ ಅಧ್ಯಯನವನ್ನು ಜೀವಂತವಾಗಿಡುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಶತಮಾನದಿಂದ ನಿರಂತರವಾಗಿ ಮಾಡುತ್ತ ಬಂದಿದೆ ಎಂದು ನ್ಯಾಯವಾದಿ ಹಾಗೂ ಸಾಹಿತಿ ಬಸವರಾಜ ಬಾಳೇಶ್ವರಮಠ ಹೇಳಿದರು.

ಗದಗ ನಗರದ ಮೇಲ್ಕಾಳಗಿ 2.2. ಆಯುರ್ವೇದ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ “ಸಾಹಿತ್ಯ ಮತ್ತು ಸಂಸ್ಕೃತಿ ಸಂವರ್ಧನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ” ವಿಷಯವಾಗಿ ಅವರು ಉಪನ್ಯಾಸ ನೀಡಿದರು.

ಕರ್ನಾಟಕ ಏಕೀಕರಣ ಹಾಗೂ ರಾಜ್ಯ ನಾಮಕರಣದ ಹೋರಾಟದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದಾಗಿದೆ. ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಂಡು ಕನ್ನಡದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಸಂತೋಷ ಬೆಳವಡಿ, ಕನ್ನಡಿಗರು ಸ್ವಾಭಿಮಾನ ಬೆಳೆಸಿಕೊಂಡು ಕನ್ನಡದ ಬೆಳವಣಿಗೆಗೆ ಶ್ರಮಿಸಬೇಕು. ಉನ್ನತ ಶಿಕ್ಷಣದ ಪಠ್ಯಗಳು ಕನ್ನಡದಲ್ಲೇ ದೊರೆಯುವಂತಹ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಸರ್ಕಾರಿ ಶಾಲೆಗಳ ಸಬಲೀಕರಣ ಸರ್ಕಾರದ ಪ್ರಮುಖ ಆದ್ಯತೆಯಾಗಬೇಕು. ಕನ್ನಡ ಮಾಧ್ಯಮ ಶಾಲೆಗಳ ಕೊಡುಗೆ ಕನ್ನಡದ ಬೆಳವಣಿಗೆಗೆ ಅಪಾರವಾಗಿದೆ ಎಂದರು.

ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆಯುತ್ತಿರುವ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸದಸ್ಯರಲ್ಲಿ ಹೊಸ ಉತ್ಸಾಹ ಮೂಡಿಸಿವೆ ಎಂದು ತಿಳಿಸಿದರು.

ಶಿಕ್ಷಣ ತಜ್ಞ ಡಾ. ಬಸವರಾಜ ಧಾರವಾಡ ಮಾತನಾಡಿ, ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ, ಪುಸ್ತಕ ಪ್ರಕಟಣೆ ಮತ್ತು ಕಾರ್ಯಾಗಾರಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ. ನಾಡು-ನುಡಿ, ನೆಲ-ಜಲದ ಪ್ರಶ್ನೆ ಎದುರಾದಾಗ ಪರಿಷತ್ತು ಸದಾ ಮುಂಚೂಣಿಯಲ್ಲಿ ನಿಂತು ಕನ್ನಡಿಗರ ಪರ ಹೋರಾಟ ನಡೆಸುತ್ತಿದೆ ಎಂದರು. ಕನ್ನಡಿಗರೆಲ್ಲರೂ ಪರಿಷತ್ತಿನ ಸದಸ್ಯರಾಗುವ ಮೂಲಕ ಸಂಘಟನೆಯ ಶಕ್ತಿಯನ್ನು ಇಮ್ಮಡಿಗೊಳಿಸಬೇಕು ಎಂದು ಕರೆ ನೀಡಿದರು.

ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ ಮಾತನಾಡಿ, ಶಿಕ್ಷಣ ಮತ್ತು ಭಾಷಾ ಚಟುವಟಿಕೆಗಳು ಸಮೃದ್ಧವಾಗಿ ಬೆಳೆಯಬೇಕಾದ ಅಗತ್ಯವಿದೆ ಎಂದರು. ಭಾಷಾ ಬೆಳವಣಿಗೆ ಮತ್ತು ಉದ್ಯೋಗದ ದೃಷ್ಟಿಯಿಂದ ತೋಂಟದ ಸಿದ್ದಲಿಂಗ ಶ್ರೀಗಳು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಎಸ್.ಎಸ್. ಪಟ್ಟಣಶೆಟ್ಟರ ಹಾಗೂ ಡಾ. ಬಸವರಾಜ ಧಾರವಾಡ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಿ.ಕೆ.ಎಚ್. ಶಾಸ್ತ್ರಿ, ಅನ್ನದಾನಿ ಹಿರೇಮಠ, ಡಿ.ಎಸ್. ಬಾಪುರಿ, ಅಮರೇಶ ರಾಂಪೂರ, ಸಿ.ಎಂ. ಮಾರನಬಸರಿ, ಪ್ರೊ. ನಾರಾಯಣಪೂರ, ಬಸವರಾಜ ವಾರಿ, ಸತೀಶ ಚನ್ನಪ್ಪಗೌಡ್ರ, ಬೂದಪ್ಪ ಅಂಗಡಿ, ಕು.ಶಿ. ಜಯದೇವಭಟ್, ಶಾರದ ಕಾತರಕಿ, ಮಲ್ಲಿಕಾರ್ಜುನ ನಿಂಗೋಜಿ, ಆನಂದ ಹಡಪದ, ಬೂದೇಶ್ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande