
ಬೆಳಗಾವಿ, 12 ಮೇ (ಹಿ.ಸ.) :
ಆ್ಯಂಕರ್ : ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ , ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ನಡೆಸುತ್ತಿರುವ ಅನ್ಯಾಯಕರ ಚೆಲ್ಲಾಟ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಅವರು, “ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ ಘಟನೆ. ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರ ಸ್ಥಿತಿಗೆ ತಳ್ಳಲ್ಪಟ್ಟಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ದೇಶದ ಅತ್ಯುನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಪಾರದರ್ಶಕವಾಗಿ ನಡೆಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ ಅವರು, “ಇದಕ್ಕಿಂತ ದೊಡ್ಡ ಆಡಳಿತ ವೈಫಲ್ಯಕ್ಕೆ ಬೇರೆ ಸಾಕ್ಷಿ ಬೇಕಿಲ್ಲ. ಪರೀಕ್ಷಾ ಅಕ್ರಮಗಳು ಹಾಗೂ ಆಡಳಿತಾತ್ಮಕ ಅಸಮರ್ಥತೆಯಿಂದ ದೇಶದ ಪ್ರತಿಭಾವಂತ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ” ಎಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳು ಹಾಗೂ ಪೋಷಕರ ವಿಶ್ವಾಸ ಕುಸಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa