
ಗದಗ, 12 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣಾಂಶದ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಪ್ರಥಮ ಆದ್ಯತೆ ನೀಡಬೇಕು ಎಂದು ರಾಜ್ಯ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಗಳಾದ ಡಾ. ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ವರ್ಷಕ್ಕಿಂತ ಈ ಬಾರಿ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಎಲ್ಲ ತಾಲ್ಲೂಕು ಪಂಚಾಯತಿ ಇಓ ಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಅನಗತ್ಯ ನೀರಿನ ಪೋಲು ಹಾಗೂ ಅಪವ್ಯಯ ತಡೆಗಟ್ಟಿ ವರ್ಷಪೂರ್ತಿ ಸಮರ್ಪಕ ನೀರು ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ತಿಮ್ಮಾಪೂರ ಗ್ರಾಮ ಸೇರಿದಂತೆ ನೀರು ಸರಬರಾಜಿನಲ್ಲಿ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವ ಗ್ರಾಮಗಳು ಹಾಗೂ ವಾರ್ಡುಗಳನ್ನು ಗುರುತಿಸಿ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಇರುವ ಕೆರೆಗಳಲ್ಲಿ ನೀರು ಸಂಗ್ರಹಕ್ಕೆ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿರುವ ಆರ್ಓ ಘಟಕಗಳ ಸಮರ್ಪಕ ನಿರ್ವಹಣೆ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಡಾ. ಎಂ ವಿ ವೆಂಕಟೇಶ ಸೂಚಿಸಿದರು.
ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸಮರ್ಪಕವಾಗಿ ನಡೆಯಬೇಕು, ಯಾವುದೇ ಕಾರಣಕ್ಕೂ ಬೀಜ ಹಾಗೂ ಗೊಬ್ಬರ ವಿತರಣೆಯಲ್ಲಿ ಅವ್ಯವಸ್ಥೆ ನಡೆಯಬಾರದು ಎಂದು ಎಚ್ಚರಿಸಿದರು.
ತೋಟಗಾರಿಕೆ ಬೆಳೆಗಳ ಕ್ಷೇತ್ರ ವಿಸ್ತರಣೆಗೆ ಗದಗ ಜಿಲ್ಲೆಯಲ್ಲಿ ಹೆಚ್ಚಿನ ಅವಕಾಶಗಳಿದ್ದು, ರೈತರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸೌಲಭ್ಯ ಒದಗಿಸಿ ಕ್ಷೇತ್ರ ವಿಸ್ತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದರು.
ಜಿಲ್ಲೆಯಲ್ಲಿ ತೀವ್ರ ಬಿಸಿಲಿನ ಪರಿಸ್ಥಿತಿ ಇರುವುದರಿಂದ ಜನಸಾಮಾನ್ಯರು, ವೃದ್ಧರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ವಿಶೇಷ ಗಮನ ಹರಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ನಿರಂತರ ಲಭ್ಯವಿದ್ದು, ತುರ್ತು ಚಿಕಿತ್ಸಾ ವ್ಯವಸ್ಥೆ ಸಮರ್ಪಕವಾಗಿರಬೇಕು ಎಂದರು.
ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ವೈದ್ಯಕೀಯ ಸೌಲಭ್ಯಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಜೀವ ರಕ್ಷಣೆಗೆ ಆದ್ಯತೆ ನೀಡಿ ಆರೋಗ್ಯ ಸೇವೆ ಸುಧಾರಣೆಗೆ ಶ್ರಮಿಸಬೇಕು ಎಂದು ಸೂಚಿಸಿದರು.
ವಸತಿ ಶಾಲೆಗಳು ಕೇವಲ ತಿಂಡಿ-ಊಟ ನೀಡುವ ಕೇಂದ್ರಗಳಾಗಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಇಂಡೆಂಟ್ ಬುಕ್ ಸರಿಯಾಗಿ ನಿರ್ವಹಿಸಿ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಡಾ. ಎಂ ವಿ ವೆಂಕಟೇಶ್ ಹೇಳಿದರು.
ಅಧಿಕಾರಿಗಳು ನಿರಂತರವಾಗಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸಬೇಕು. ನಿರ್ಲಕ್ಷ್ಯ ಕಂಡುಬಂದಲ್ಲಿ ಶಿಸ್ತು ಕ್ರಮ ಅನಿವಾರ್ಯವಾಗುತ್ತದೆ ಎಂದು ಇದೇ ವೇಳೆ ಎಚ್ಚರಿಸಿದರು.
ಗದಗ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ 219 ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ವಿಶೇಷ ಅಭಿಯಾನ ರೂಪಿಸಬೇಕು ಎಂದು ಸೂಚಿಸಿದರು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂದರು.
ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲೆ 16ನೇ ಸ್ಥಾನದಲ್ಲಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಶಿಕ್ಷಕರ ಕೊರತೆ ಇರುವ ಕಡೆ ಅತಿಥಿ ಶಿಕ್ಷಕರ ಸೇವೆ ಪಡೆಯುವಂತೆ ಸೂಚಿಸಿದರು. ಪಿಯುಸಿ ಫಲಿತಾಂಶ ಅತ್ಯಂತ ಕಳಪೆ ಮಟ್ಟದಲ್ಲಿದ್ದು, ಅಧಿಕಾರಿಗಳ ಪ್ರಯತ್ನ ಸಮರ್ಪಕವಾಗಿ ಕಾಣುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉತ್ತಮವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂದು ಹೇಳಿದರು.
ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬ ಸರಿಪಡಿಸಬೇಕು. ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಗ್ಯಾಸ್ ಸಿಲಿಂಡರ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಉದ್ಯೋಗ ಮೇಳಗಳನ್ನು ಆಯೋಜಿಸಿ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಪಂಚಾಯತಿಗಳಲ್ಲಿ ಸಕಾಲ ಯೋಜನೆಯಡಿ ಬಾಕಿ ಇರುವ ಅರ್ಜಿಗಳನ್ನು ಆದ್ಯತೆಯ ಮೇರೆಗೆ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಆಡಳಿತಾಧಿಕಾರಿ ಡಾ. ಎಂ ವಿ ವೆಂಕಟೇಶ ತಿಳಿಸಿದರು.
ಕೆರೆಗಳ ಸಂರಕ್ಷಣೆ ಮೂಲಕ ನೀರಿನ ಮೂಲಗಳನ್ನು ಶಾಶ್ವತವಾಗಿ ಉಳಿಸಬೇಕು ಎಂದು ಸೂಚಿಸಿದ ಅವರು, ಕೆರೆಗಳು ಪ್ರಾಣಿ-ಪಕ್ಷಿಗಳು ಸೇರಿದಂತೆ ಎಲ್ಲ ಜೀವಿಗಳಿಗೂ ಜೀವಜಲದ ಮೂಲವಾಗಿವೆ ಅವುಗಳ ರಕ್ಷಣೆ ಎಲರದ್ದು ಎಂದರು.
ಪ್ರತಿ ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಕಸ ನಿರ್ವಹಣೆ ಸಮರ್ಪಕವಾಗಿ ನಡೆಯಬೇಕು. ಹಸಿ ಕಸ ಮತ್ತು ಒಣ ಕಸವನ್ನು ಮೂಲದಲ್ಲೇ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸೂಚಿಸಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳ ಪ್ರಗತಿ, ಸಮಸ್ಯೆಗಳು ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಗಂಗಾ ಕಲ್ಯಾಣ ಯೋಜನೆ ಕುರಿತು ಮಾಹಿತಿ ನೀಡಿದ ನಿಗಮದ ಅಧಿಕಾರಿಗಳು, ಯೋಜನೆಯಡಿ ಮಂಜೂರಾಗಿರುವ 22 ಫಲಾನುಭವಿಗಳ ಬೋರ್ವೆಲ್ಗಳಿಗೆ 500 ಮೀಟರ್ಗಿಂತ ಹೆಚ್ಚು ಅಂತರ ಇರುವ ಕಾರಣ ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು. ಅಂತಹ ಬೋರ್ವೆಲ್ಗಳಿಗೆ ಸೋಲಾರ್ ವ್ಯವಸ್ಥೆ ಅಳವಡಿಕೆ ಅಗತ್ಯವಿದ್ದು, ಇದರಿಂದ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ದೊರಕುವಲ್ಲಿ ವಿಳಂಬ ಉಂಟಾಗುತ್ತಿದೆ ಎಂದು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ ಮಾತನಾಡಿ, ಜಿಲ್ಲೆಯಲ್ಲಿ ಸದ್ಯ 123 ಅಪೌಷ್ಟಿಕ ಮಕ್ಕಳು ಗುರುತಿಸಲ್ಪಟ್ಟಿದ್ದಾರೆ. ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಅಗತ್ಯ ಪೌಷ್ಟಿಕ ಆಹಾರ ಹಾಗೂ ಆರೈಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 126 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಅಗತ್ಯವಿದ್ದು, ಈ ಕುರಿತು ಕ್ರಮ ವಹಿಸಲಾಗುತ್ತಿದೆ. ಉಳಿದಂತೆ ಇಲಾಖೆಯ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 9 ನಗರ ಸ್ಥಳೀಯ ಸಂಸ್ಥೆಗಳಿದ್ದು, ಗದಗ-ಬೆಟಗೇರಿ ನಗರಕ್ಕೆ ಪ್ರತಿ 8 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಉಳಿದ ದಿನಗಳಲ್ಲಿ ಸಾರ್ವಜನಿಕರ ನಿತ್ಯ ಬಳಕೆಗೆ ಬೋರ್ವೆಲ್ ಹಾಗೂ ಆರ್ಓ ಘಟಕಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಹೇಳಿದರು.
ಪಶುಸಂಗೋಪನೆ ಇಲಾಖೆ ಡಿಡಿ ಡಾ. ಎಚ್.ಬಿ. ಹುಲಗಣ್ಣನವರ, ಜಿಲ್ಲೆಯಲ್ಲಿ ಸದ್ಯ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ. ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದಲ್ಲಿ 31 ಕಡೆ ಮೇವು ಬ್ಯಾಂಕ್ ಆರಂಭಿಸಲು ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಹೆಸರು, ಮುಸುಕಿನ ಜೋಳ ಹಾಗೂ ಸೂರ್ಯಕಾಂತಿ ಪ್ರಮುಖ ಬೆಳೆಗಳಾಗಿವೆ. ಮುಂಗಾರು ಹಂಗಾಮಿನಲ್ಲಿ 3.14 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಯೂರಿಯಾ, ಡಿಎಪಿ ಹಾಗೂ ಕಾಂಪ್ಲೆಕ್ಸ್ ಗೊಬ್ಬರಗಳ ಲಭ್ಯತೆ ಕುರಿತು ಮಾಹಿತಿ ನೀಡಿದ ಅವರು, ಸದ್ಯ 7,468 ಮೆಟ್ರಿಕ್ ಟನ್ ಗೊಬ್ಬರ ಮಾರಾಟವಾಗಿದ್ದು, 15,948 ಮೆಟ್ರಿಕ್ ಟನ್ ಗೊಬ್ಬರ ದಾಸ್ತಾನು ಉಳಿದಿದೆ ಎಂದು ತಿಳಿಸಿದರು. ರೈತರಿಗೆ ಗೊಬ್ಬರ ಹಾಗೂ ಬೀಜ ಕೊರತೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಎಸಿ ಗಂಗಪ್ಪ ಎಂ, ಡಿಎಸ್ ಸಿ ಆರ್ ಮುಂಡರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರರು, ತಾಪಂ ಇಒಗಳು ಉಪಸ್ಥಿತರಿದ್ದರು.
ಈಗಾಗಲೇ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಸಭೆ ನಡೆಸಿ, ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಸಮರ್ಪಕ ನೀರು ಪೂರೈಕೆ, ಆರ್ಓ ಘಟಕಗಳ ನಿರ್ವಹಣೆ ಹಾಗೂ ಸಮಸ್ಯಾತ್ಮಕ ಪ್ರದೇಶಗಳ ನಿರಂತರ ಮೇಲ್ವಿಚಾರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕ ಉಷ್ಣಾಂಶ ಹಿನ್ನೆಲೆಯಲ್ಲಿ ಜನರ ಆರೋಗ್ಯ ರಕ್ಷಣೆಗೂ ವಿಶೇಷ ಗಮನ ನೀಡಲಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳ ಲಭ್ಯತೆ ಖಚಿತಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇಂದು ಸಭೆಯಲ್ಲಿ ನೀಡಿದ ಎಲ್ಲ ಸೂಚನೆಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ
ಸಿ ಎನ್ ಶ್ರೀಧರ ತಿಳಿಸಿದ್ದಾರೆ.
“ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣಾಂಶದ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಲು ಮೊದಲ ಆದ್ಯತೆ ನೀಡಬೇಕು. ಮುಂಗಾರು ಹಂಗಾಮಿಗೆ ಅಗತ್ಯ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಅವ್ಯವಸ್ಥೆ ಆಗಬಾರದು. ಗ್ಯಾಸ್ ಸಿಲಿಂಡರ್ ಪೂರೈಕೆಯ ವಿಳಂಬ ಸರಿಪಡಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅಧಿಕ ಬಿಸಿಲಿನ ಪರಿಣಾಮದಿಂದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಡಾ: ಎಂ ವಿ ವೆಂಕಟೇಶ್ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / lalita MP