
ಬಾಗಲಕೋಟೆ, 12 ಮೇ (ಹಿ.ಸ.) :
ಆಂಕರ್ : ಕಡಿಮೆ ವೇತನ, ಸುರಕ್ಷತಾ ಸೌಲಭ್ಯಗಳ ಕೊರತೆ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಸಮೀಪದ ಕೇಶವ ಸಿಮೆಂಟ್ ಕಾರ್ಖಾನೆಯ ನೂರಾರು ಕಾರ್ಮಿಕರು ಇಂದು ಭಾರಿ ಪ್ರತಿಭಟನೆ ನಡೆಸಿದರು.
ಕಾರ್ಮಿಕರು ಕಾರ್ಖಾನೆಯ ಮುಖ್ಯ ದ್ವಾರಕ್ಕೆ ಬೀಗ ಜಡಿದು ಧರಣಿ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಕಳೆದ 19 ವರ್ಷಗಳಿಂದ ಸಮರ್ಪಕ ವೇತನ ಹೆಚ್ಚಳ ಆಗದೇ ಜೀವನ ಸಾಗಿಸಲು ಸಂಕಷ್ಟ ಅನುಭವಿಸುತ್ತಿದ್ದೇವೆ ಎಂದು ಕಾರ್ಮಿಕರು ಆರೋಪಿಸಿದರು.
ಪ್ರಸ್ತುತ 10 ರಿಂದ 15 ಸಾವಿರ ರೂಪಾಯಿ ಸಂಬಳದಲ್ಲಿ ಕುಟುಂಬ ನಿರ್ವಹಣೆ ಅಸಾಧ್ಯವಾಗಿದ್ದು, ತಕ್ಷಣವೇ ಮಾಸಿಕ ವೇತನವನ್ನು ಕನಿಷ್ಠ 22 ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ವೇಳೆ ಕಾರ್ಮಿಕರು ಆಡಳಿತ ಮಂಡಳಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಖಾನೆಯಲ್ಲಿ ಕಾರ್ಮಿಕರ ಸುರಕ್ಷತೆಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳೇ ಇಲ್ಲ ಎಂದು ಆರೋಪಿಸಿದರು.
“ನಾಲ್ಕು ವರ್ಷಕ್ಕೊಮ್ಮೆ ಮಾತ್ರ ಇನ್ಕ್ರಿಮೆಂಟ್ ನೀಡಲಾಗುತ್ತಿದೆ. ಆರು ವರ್ಷಕ್ಕೊಮ್ಮೆ ಶೂ ಕೊಡಲಾಗುತ್ತದೆ. ಹೆಲ್ಮೆಟ್ಗಳಂತಹ ಸುರಕ್ಷತಾ ಸಾಧನಗಳೂ ಸರಿಯಾಗಿ ಲಭ್ಯವಿಲ್ಲ” ಎಂದು ಕಾರ್ಮಿಕರು ತಮ್ಮ ಅಳಲನ್ನು ವ್ಯಕ್ತಪಡಿಸಿದರು.
ಇದೇ ವೇಳೆ ಗುತ್ತಿಗೆ ಆಧಾರಿತ ಕಾರ್ಮಿಕರಿಗೆ ದಿನಕ್ಕೆ 750 ರೂ. ಕೂಲಿ ನೀಡಲಾಗುತ್ತಿದ್ದು, ಸ್ಥಳೀಯ ಕಾರ್ಮಿಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂತು.
ಕಾರ್ಮಿಕರ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದರೆ ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
“ನಮಗೆ ನ್ಯಾಯ ಸಿಗುವವರೆಗೆ ಮತ್ತು ಕಾರ್ಖಾನೆ ಮಾಲೀಕರು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವ ಭರವಸೆ ನೀಡುವವರೆಗೆ ಹೋರಾಟ ಮುಂದುವರಿಸುತ್ತೇವೆ” ಎಂದು ಕಾರ್ಮಿಕರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಕಾರ್ಖಾನೆ ಆವರಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಕಾರ್ಖಾನೆ ಆಡಳಿತ ಮಂಡಳಿ ಈ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande