
ವಿಜಯಪುರ, 12 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ
ಹಿರಿಯ ನಾಗರಿಕರು ಹಾಗೂ ಒಂಟಿಯಾಗಿ ವಾಸಿಸುವ ಮಹಿಳೆಯರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವ ಜೊತೆಗೆ, ಅವರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ‘ಆಸರೆ’ ಯೋಜನೆ ವಿಜಯಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಮನೆ-ಮನೆಗೆ ತೆರಳಿ ಸಮಸ್ಯೆ ಆಲಿಸುವ ಮೂಲಕ ಜಿಲ್ಲಾ ಪೊಲೀಸರು ಮಾನವೀಯತೆ ಮೆರೆದಿದ್ದು, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಆಸರೆ’ ಯೋಜನೆಯನ್ನು ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ. ಜಿಲ್ಲೆಯ ಎಲ್ಲಾ 28 ಪೊಲೀಸ್ ಠಾಣೆಗಳ ವ್ಯಾಪ್ತಿಯ 329 ಬೀಟ್ಗಳಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ಈಗಾಗಲೇ ನಡೆಯುತ್ತಿರುವ ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮದೊಂದಿಗೆ ಇದನ್ನು ಸಂಯೋಜಿಸಲಾಗಿದೆ.
ಪ್ರತಿ ಬೀಟ್ನ ಪೊಲೀಸ್ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯಲ್ಲಿರುವ ಏಕಾಂಗಿಯಾಗಿ ವಾಸಿಸುವ ಹಿರಿಯ ನಾಗರಿಕರು, ವಿಧವೆಯರು, ಅವಿವಾಹಿತ ಮಹಿಳೆಯರು ಹಾಗೂ ವಿಚ್ಛೇದಿತ ಮಹಿಳೆಯರನ್ನು ಗುರುತಿಸಿ, ಅವರ ಮನೆಗಳಿಗೆ ಖುದ್ದಾಗಿ ಭೇಟಿ ನೀಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ನೆರವು ಹಾಗೂ ಸರ್ಕಾರಿ ಯೋಜನೆಗಳ ಮಾಹಿತಿ ನೀಡುವ ಮೂಲಕ ವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದಾರೆ.
ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಬಸ್ ಪ್ರಯಾಣ ದರದಲ್ಲಿ ರಿಯಾಯಿತಿ, ವಿಧವಾ ವೇತನ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಪೊಲೀಸರು ಅರಿವು ಮೂಡಿಸುತ್ತಿದ್ದಾರೆ. ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿನ 40 ರಿಂದ 64 ವರ್ಷದೊಳಗಿನ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ನೆರವು, ಮೃತ ರೈತರ ಪತ್ನಿಯರಿಗೆ ಮಾಶಾಸನ ಹಾಗೂ ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಸಹಾಯಧನ ತಲುಪಿಸುವ ಕಾರ್ಯಕ್ಕೂ ಆದ್ಯತೆ ನೀಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 73 ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸೌಲಭ್ಯಗಳು ದೊರಕುವಂತೆ ಪೊಲೀಸ್ ಇಲಾಖೆ ಪ್ರಮುಖ ಪಾತ್ರ ವಹಿಸಿದೆ. ಈ ಯೋಜನೆಯಿಂದ ಅನೇಕ ಹಿರಿಯ ನಾಗರಿಕರು ಹಾಗೂ ಮಹಿಳೆಯರು ಹೊಸ ಭರವಸೆ ಕಂಡಿದ್ದು, ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಆಸರೆ ಯೋಜನೆಯನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಬೀಟ್ ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುತ್ತಿದ್ದು, ಅರ್ಹರಿಗೆ ಸರ್ಕಾರದ ಸೌಲಭ್ಯಗಳು ನೇರವಾಗಿ ತಲುಪುವಂತೆ ಶ್ರಮಿಸುತ್ತಿದ್ದಾರೆ. ಸಾಮಾಜಿಕ ಕಾಳಜಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಿಜಯಪುರ ಜಿಲ್ಲಾ ಪೊಲೀಸರ ಈ ವಿನೂತನ ಕಾರ್ಯಕ್ರಮ ಇದೀಗ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande