
ಗದಗ, 12 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲೂಕ ಪಂಚಾಯತಿ ಸಭಾಭವನದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಸಹಾಯಕ ಲೆಕ್ಕಾಧಿಕಾರಿಗಳು,ತಾಲೂಕ ಪಂಚಾಯತ ರೋಣ ಇವರ ಉಪಸ್ಥಿತಿಯಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ವಾಟರ್ಮೆನ್ಗಳು, ನರೇಗಾ ಸಿಬ್ಬಂದಿಗಳು ಹಾಗೂ ತಾಲೂಕ ಪಂಚಾಯತಿ ಸಿಬ್ಬಂದಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿಗಳು, ಬೇಸಿಗೆ ಸಂದರ್ಭದಲ್ಲಿ ನಮ್ಮ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಡಿಬಿಓಟಿ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಪಿಡಿಒಗಳು ನಿರಂತರ ನಿಗಾ ವಹಿಸಬೇಕು. ಪ್ರತಿದಿನ ಮುಂಜಾನೆ ಹಾಗೂ ಸಂಜೆ ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಸರಬರಾಜು ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಬೇಕು. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬಂದ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಕೆಲವು ಗ್ರಾಮಗಳಲ್ಲಿ ಬೋರ್ವೆಲ್ಗಳ ನೀರಿನ ಮಟ್ಟ ಕುಸಿತ, ಮೋಟಾರ್ ದೋಷ, ವಿದ್ಯುತ್ ಸಮಸ್ಯೆ ಹಾಗೂ ಪೈಪ್ಲೈನ್ ದುರಸ್ತಿ ಸಮಸ್ಯೆಗಳಿಂದ ಕುಡಿಯುವ ನೀರಿನ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ತ್ವರಿತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಲಾಯಿತು. ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.
ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಕಾರ್ಯಕ್ಕೆ ವೇಗ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದರು. ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಳ್ಳುವ ಜೊತೆಗೆ ಯೋಜನೆಯ ಲಾಭ ಪ್ರತಿಯೊಂದು ಮನೆಗೂ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನರೇಗಾ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು, ಉದ್ಯೋಗ ಸೃಷ್ಟಿ, ಕೆರೆ ಅಭಿವೃದ್ಧಿ, ನೀರು ಸಂರಕ್ಷಣೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯತಿಗಳಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಗಡುವಿನೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗೆ ತ್ವರಿತ ಸ್ಪಂದನೆ ನೀಡಬೇಕು ಎಂದು ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯತಿಗಳ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / lalita MP