
ವಿಜಯಪುರ, 13 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ ಆಲಮಟ್ಟಿಯ ಕೃಷ್ಣಾ ಜಲ ನಿಗಮದ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಮುದ್ದೇಬಿಹಾಳ ತಾಲೂಕಿನ 36 ಕೆರೆಗಳಿಗೆ ತಕ್ಷಣವೇ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ನೂರಾರು ರೈತರು ಹಾಗೂ ಗ್ರಾಮಸ್ಥರು ಭಾಗವಹಿಸಿದರು.
ಬೇಸಿಗೆಯ ತೀವ್ರ ಬಿಸಿಲಿನಿಂದ ಮುದ್ದೇಬಿಹಾಳ ಭಾಗದ ಕೆರೆಗಳು ಸಂಪೂರ್ಣ ಬತ್ತಿ ಹೋಗಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆ ತಕ್ಷಣವೇ ಕೃಷ್ಣಾ ನದಿಯಿಂದ ಕೆರೆಗಳಿಗೆ ನೀರು ಹರಿಸಿ ಜನರ ಸಂಕಷ್ಟ ನಿವಾರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆ ವೇಳೆ ರೈತರು ರಾಜ್ಯ ಸರ್ಕಾರ ಹಾಗೂ ಕೃಷ್ಣಾ ಜಲ ನಿಗಮದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ಕೃಷ್ಣಾ ನದಿಯಲ್ಲಿ ನೀರಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಖಾಲಿಯಾಗಿವೆ. ಜನಜಾನುವಾರುಗಳು ನೀರಿಲ್ಲದೆ ನರಳುತ್ತಿವೆ. ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ರೈತ ಮುಖಂಡರು ಎಚ್ಚರಿಸಿದರು.
ಮುದ್ದೇಬಿಹಾಳ ತಾಲೂಕಿನ ಅನೇಕ ಗ್ರಾಮಗಳಲ್ಲಿ ನೀರಿನ ಕೊರತೆಯಿಂದ ರೈತರು ಜಾನುವಾರುಗಳನ್ನು ದೂರದ ಪ್ರದೇಶಗಳಿಗೆ ಕರೆದೊಯ್ಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದರೂ ಅದು ಸಮರ್ಪಕವಾಗಿಲ್ಲ ಎಂದು ಗ್ರಾಮಸ್ಥರು ದೂರಿದರು. ಕೆರೆಗಳಿಗೆ ನೀರು ಹರಿಸಿದರೆ ಅಂತರ್ಜಲ ಮಟ್ಟವೂ ಏರಿಕೆಯಾಗಲಿದೆ ಮತ್ತು ಜನರಿಗೆ ಸ್ವಲ್ಪ ಮಟ್ಟಿನ ಪರಿಹಾರ ದೊರೆಯಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ರೈತರ ಮನವಿಯನ್ನು ಸ್ವೀಕರಿಸಿ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಆದರೆ ಸ್ಪಷ್ಟ ಭರವಸೆ ಸಿಗದ ಹಿನ್ನೆಲೆ ರೈತರು ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಕೃಷ್ಣಾ ಜಲ ನಿಗಮದ ಕಚೇರಿಗೆ ಬೀಗ ಜಡಿದು ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.
ಹಿಂದೂಸ್ತಾನ್ ಸಮಾಚಾರ್ / jyothi deshpande