
ಬೆಂಗಳೂರು, 13 ಮೇ (ಹಿ.ಸ.) :
ಆ್ಯಂಕರ್ : ಮೇ 3ರಂದು ನಡೆದಿದ್ದ ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿರುವ ನಿರ್ಧಾರಕ್ಕೆ ಸಂಬಂಧಿಸಿ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಅಸಮರ್ಥತೆ ಜಗತ್ತಿಗೆ ಬಹಿರಂಗವಾಗಿದೆ ಎಂದು ಆರೋಪಿಸಿದ ಅವರು, ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರು ಮಾಡಿರುವ ಈ ಅಕ್ರಮಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿದರು.
ದೇಶದ ಪರೀಕ್ಷಾ ವ್ಯವಸ್ಥೆಯನ್ನು ನಂಬಿಕಸ್ತವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವರು ತಕ್ಷಣ ರಾಜೀನಾಮೆ ನೀಡಿ ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಪದೇ ಪದೇ ಹಗರಣಗಳಿಗೆ ಕಾರಣವಾಗುತ್ತಿರುವ ದೋಷಪೂರಿತ ನೀಟ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದೂ ಒತ್ತಾಯಿಸಿದರು.
ದೆಹಲಿಯ “ರಿಮೋಟ್ ಕಂಟ್ರೋಲ್” ಮೂಲಕ ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಿ, ಕರ್ನಾಟಕದ ಪಾರದರ್ಶಕ ಸಿಇಟಿ ವ್ಯವಸ್ಥೆಗೆ ಮತ್ತೆ ಪ್ರವೇಶಾತಿ ಅಧಿಕಾರ ಹಿಂತಿರುಗಿಸಬೇಕು ಎಂದು ಅವರು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ಸಿಬಿಐ ತನಿಖೆ ನಡೆಯಬೇಕು ಎಂದು ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.