
ವಿಜಯಪುರ, 13 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನತೆಗೆ ಸಮರ್ಪಕ ಮತ್ತು ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಯೋಜನೆಗಳ ಅನುಷ್ಠಾನವನ್ನು ವೇಗಗೊಳಿಸುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಬಹು ಗ್ರಾಮ ಕುಡಿಯುವ ನೀರು ಜಲಧಾರೆ (DBOT) ಯೋಜನೆ ಹಾಗೂ ಜಲ್ ಜೀವನ್ ಮಿಷನ್ ಅಡಿಯಲ್ಲಿ ಜಾರಿಯಾಗುತ್ತಿರುವ “ಹರ್ ಘರ್ ಜಲ್” ಯೋಜನೆಗಳ ಪ್ರಗತಿ ಕುರಿತು ಸವಿಸ್ತಾರ ಚರ್ಚೆ ನಡೆಯಿತು.
ಸಭೆಯಲ್ಲಿ ವಿವಿಧ ತಾಲೂಕುಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಿತಿ, ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿರುವ ಮನೆಗಳ ಸಂಖ್ಯೆ, ಕಾಮಗಾರಿಗಳ ಗುಣಮಟ್ಟ ಹಾಗೂ ಯೋಜನೆಗಳ ಪೂರ್ಣಗೊಳಿಸುವ ಅವಧಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಾಯಿತು.
ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಉಂಟಾಗದಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಿಇಒ ರಿಷಿ ಆನಂದ ಸೂಚನೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಂಜಯ ಕೋಟೆನ್ನವರ ಸಭೆಯಲ್ಲಿ ಯೋಜನೆಗಳ ಪ್ರಗತಿ ಕುರಿತು ವಿವರ ನೀಡಿ, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.
ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಕಿರಿಯ ಅಭಿಯಂತರರು, ಜಲಧಾರೆ ಯೋಜನೆಯ ಗುತ್ತಿಗೆದಾರರು, ಡಿಪಿಎಮ್, ವಿಷಯ ನಿರ್ವಾಹಕರು ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.
ಜಲ್ ಜೀವನ್ ಮಿಷನ್ ಯೋಜನೆಯಡಿ ಪ್ರತಿಯೊಂದು ಗ್ರಾಮೀಣ ಮನೆಗೂ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande