
ಬಾಗಲಕೋಟೆ, 14 ಮೇ (ಹಿ.ಸ.) :
ಆಂಕರ್ : ಜಾಗದ ವಿಚಾರವಾಗಿ ಉಂಟಾದ ವೈಮನಸ್ಸು ಮಾರಣಾಂತಿಕ ಹಲ್ಲೆಗೆ ತಿರುಗಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ. ಸುಮಾರು 15 ಜನರ ಗುಂಪೊಂದು ಐವರು ವ್ಯಕ್ತಿಗಳ ಮೇಲೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು.
ಹಲ್ಲೆಯಲ್ಲಿ ಹಾಶೀಮ್ ಜಕಲಿ, ಸೈಯದ್ ಜಕಲಿ ಹಾಗೂ ಶರೀಫ್ ಜಕಲಿ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತಕ್ಷಣ ಸ್ಥಳೀಯರು ಮತ್ತು ಕುಟುಂಬಸ್ಥರು ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆ ಇದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಜಾಗದ ವಿಚಾರವಾಗಿ ಎರಡು ಗುಂಪುಗಳ ನಡುವೆ ಹಲವು ದಿನಗಳಿಂದ ವೈಮನಸ್ಸು ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇದೇ ವಿಚಾರ ಮಂಗಳವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಾವೀದ್ ಸಾಂಗ್ಲಿಕರ್ ಹಾಗೂ ಅವರೊಂದಿಗೆ ಬಂದ ಗುಂಪು ಏಕಾಏಕಿ ಇಂದು ದಾಳಿ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳು ಕಟ್ಟಿಗೆ ಮತ್ತು ರಾಡ್ ಹಿಡಿದು ಬಂದು ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳ ಕುಟುಂಬಸ್ಥರು ದೂರಿದ್ದಾರೆ.
ಘಟನೆ ವೇಳೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಭಯಭೀತರಾಗಿದ್ದರು. ಸ್ಥಳೀಯರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಯತ್ನಿಸಿದ ನಂತರ ಹಲ್ಲೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಾಯಾಳುಗಳ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಹಲ್ಲೆಯ ನಿಖರ ಕಾರಣ ಹಾಗೂ ಭಾಗಿಯಾಗಿರುವ ಆರೋಪಿಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮುಧೋಳ ನಗರದಲ್ಲಿ ನಡೆದ ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಜಾಗದ ವಿವಾದಗಳು ಹಿಂಸಾತ್ಮಕ ಸ್ವರೂಪ ಪಡೆಯುತ್ತಿರುವ ಬಗ್ಗೆ ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande