ಕೆರೆಯಲ್ಲಿ ಮಣ್ಣು ತೆಗೆಯುವ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಆರೋಪ
ಬಾಗಲಕೋಟೆ, 15 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ಕೆರೆ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಯ ಹೆಸರಿನಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೆರೂರ ಭಾಗದಲ್ಲಿ ಕೇಳಿಬಂದಿದ್ದು, ಈ ಸಂಬಂಧ ಕಂದಾಯ ಇಲಾಖೆ ಅಧ
Soil


ಬಾಗಲಕೋಟೆ, 15 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ಕೆರೆ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಯ ಹೆಸರಿನಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೆರೂರ ಭಾಗದಲ್ಲಿ ಕೇಳಿಬಂದಿದ್ದು, ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ರೈತರು ಆಗ್ರಹಿಸಿದ್ದಾರೆ.

ಭಾರತ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಗುತ್ತಿಗೆ ಕಂಪನಿಗೆ ಮಣ್ಣು ಪೂರೈಕೆ ಮಾಡುವ ಉದ್ದೇಶದಿಂದಲೇ ಸರ್ಕಾರಿ ಜಾಗವನ್ನು ಬಳಸಿಕೊಂಡು ಭಾರೀ ಪ್ರಮಾಣದಲ್ಲಿ ಮಣ್ಣು ತೆಗೆದುಕೊಳ್ಳಲಾಗುತ್ತಿದೆ ಎಂಬ ಅನುಮಾನ ಸ್ಥಳೀಯರಲ್ಲಿ ವ್ಯಕ್ತವಾಗಿದೆ. ಈ ಕುರಿತು ಗ್ರಾಮಸ್ಥರು ಮತ್ತು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಜಾಗ ಹಾಗೂ ಕೆರೆ ಪ್ರದೇಶದಲ್ಲಿ ಜೆಸಿಬಿ ಮತ್ತು ಟಿಪ್ಪರ್ ವಾಹನಗಳ ಮೂಲಕ ಹಗಲು-ರಾತ್ರಿ ಮಣ್ಣು ಸಾಗಣೆ ನಡೆಯುತ್ತಿದೆ ಎನ್ನಲಾಗಿದೆ. ಮಣ್ಣು ತೆಗೆಯುವ ಕಾರ್ಯದಿಂದ ಕೃಷಿಭೂಮಿಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಪರಿಸರ ಸಮತೋಲನಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ರೈತರು ಹೇಳಿದ್ದಾರೆ.

“ಕೆರೆ ಅಭಿವೃದ್ಧಿ ಎಂಬ ನೆಪದಲ್ಲಿ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ. ಸರ್ಕಾರದ ಜಮೀನನ್ನು ಖಾಸಗಿ ಗುತ್ತಿಗೆದಾರರ ಲಾಭಕ್ಕಾಗಿ ಬಳಸಲಾಗುತ್ತಿದೆ. ಇದಕ್ಕೆ ಕೆಲ ಅಧಿಕಾರಿಗಳ ಸಹಕಾರವಿಲ್ಲದೆ ಸಾಧ್ಯವಿಲ್ಲ” ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಸ್ಥಳೀಯರು ಹೇಳುವಂತೆ, ಮಣ್ಣು ಸಾಗಣೆ ಮಾಡುವ ವಾಹನಗಳಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿದ್ದು, ಧೂಳು ಮತ್ತು ಶಬ್ದದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಶಾಲಾ ಮಕ್ಕಳು ಹಾಗೂ ರೈತರು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ.

ಇದಲ್ಲದೆ, ಮಣ್ಣು ಗಣಿಗಾರಿಕೆಗೆ ಅಗತ್ಯ ಅನುಮತಿ ಪಡೆದಿದೆಯೇ? ಪರಿಸರ ಇಲಾಖೆಯ ಒಪ್ಪಿಗೆ ಇದೆಯೇ? ಎಷ್ಟು ಪ್ರಮಾಣದಲ್ಲಿ ಮಣ್ಣು ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಘಟನೆಯ ಕುರಿತು ಜಿಲ್ಲಾಡಳಿತ ತಕ್ಷಣ ಗಮನಹರಿಸಿ, ಸ್ಥಳ ಪರಿಶೀಲನೆ ನಡೆಸಬೇಕು.

ಅಕ್ರಮ ನಡೆದಿರುವುದು ಸಾಬೀತಾದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆ ಕಂಪನಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದ್ದು, “ಸರ್ಕಾರಿ ಜಮೀನಿನ ರಕ್ಷಣೆ ಯಾರು ಮಾಡಬೇಕು?” ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande