


ವಿಜಯಪುರ, 15 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಗಾಳಿ ಹಾಗೂ ಮಳೆಯಿಂದ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.
ಘಟನೆ ಇಡೀ ಗ್ರಾಮವನ್ನು ಬೆಚ್ಚಿಬೀಳಿಸಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮೃತರನ್ನು ಗುರುನಾಥ ಬಡಿಗೇರ (35), ಅವರ ಪತ್ನಿ ಜ್ಯೋತಿ ಬಡಿಗೇರ (28), ಪುತ್ರಿ ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ.
ಕುಟುಂಬದ ಮೂಲ ಮನೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅವರು ತಾತ್ಕಾಲಿಕವಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ನಿನ್ನೆ ತಡರಾತ್ರಿ ಆಲಮೇಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿದಿತ್ತು. ಈ ವೇಳೆ ಮೊರಟಗಿ ಗ್ರಾಮದಲ್ಲಿದ್ದ ಬಾಡಿಗೆ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮನೆಯೊಳಗಿದ್ದ ನಾಲ್ವರು ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.
ಭಾರೀ ಶಬ್ದ ಕೇಳಿ ಸ್ಥಳೀಯರು ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗ್ರಾಮಸ್ಥರು ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಮೇಲ್ಚಾವಣಿಯ ಅವಶೇಷಗಳಡಿ ಸಿಲುಕಿದ್ದ ಕುಟುಂಬ ಸದಸ್ಯರನ್ನು ಹೊರತೆಗೆದಲು ಸಾಧ್ಯವಾಗಲಿಲ್ಲ.
ಬಳಿಕ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸಿಂದಗಿ ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಶೇಷಗಳನ್ನು ತೆರವುಗೊಳಿಸಿ ನಾಲ್ವರ ಶವಗಳನ್ನು ಹೊರತೆಗೆದಲು ಸಿಬ್ಬಂದಿ ಹರಸಾಹಸಪಟ್ಟರು.
ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಹಳೆಯ ಹಾಗೂ ದುರ್ಬಲ ಮನೆಗಳ ಸುರಕ್ಷತೆ ಕುರಿತು ಮತ್ತೆ ಆತಂಕ ಮೂಡಿದ್ದು, ಸ್ಥಳೀಯರು ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಈ ದುರ್ಘಟನೆ ಗ್ರಾಮಸ್ಥರ ಮನಕಲಕಿದ್ದು, ಮೃತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande