ರಾಜ್ಯದಲ್ಲಿ ಮಳೆ ರೌದ್ರನರ್ತನ ; ಆರು ಮಂದಿ ಸಾವು
ನಾನಾ
ಕುಸಿದ ಮನೆ ಚಿತ್ರ


ಬೆಂಗಳೂರು, 15 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದ ನಾನಾ ಜಿಲ್ಲೆಗಳಲ್ಲಿ ಗುರುವಾರ ತಡ ರಾತ್ರಿ ಸುರಿದ ಭಾರಿ ಮಳೆ, ಬಿರುಗಾಳಿ ಹಾಗೂ ಗುಡುಗು-ಸಿಡಿಲಿನ ಅಬ್ಬರಕ್ಕೆ ಜನಜೀವನ ತತ್ತರಿಸಿದೆ. ವಿಜಯಪುರ, ದಾವಣಗೆರೆ ಸೇರಿದಂತೆ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಮನೆಗಳು ಕುಸಿದು, ಮರಗಳು ನೆಲಕ್ಕುರುಳಿ, ವಿದ್ಯುತ್ ಕಂಬಗಳು ಧರೆಗುರುಳಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ.

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಗೆ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಮಕ್ಕಳಾದ ಕಾಳಮ್ಮ (13) ಹಾಗೂ ಕೀರ್ತಿ (9) ಮೃತ ದುರ್ದೈವಿಗಳು.

ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮನೆ ಸಂಪೂರ್ಣ ಕುಸಿದ ಪರಿಣಾಮ ಕುಟುಂಬದವರು ಅವಶೇಷಗಳಡಿ ಸಿಲುಕಿದ್ದರು. ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ನಾಲ್ವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ಇನ್ನೊಂದೆಡೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಬಿರುಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ಜರೇಕಟ್ಟೆ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಅಜಿತ್ (19) ಎಂಬ ಯುವಕನಿಗೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಾತ್ರಿ ಸುರಿದ ಮಳೆಯಿಂದ ರಾಜ್ಯದ ಹಲವೆಡೆ ಅಪಾರ ಹಾನಿಯಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಶಾಲೆಯ ಮೇಲ್ಚಾವಣಿ ಹಾರಿಹೋಗಿದೆ. ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಐದು ಮನೆಗಳ ಮೇಲ್ಚಾವಣಿಗಳು ಕುಸಿದು ದವಸ-ಧಾನ್ಯಗಳು ಹಾನಿಗೊಳಗಾಗಿವೆ.

ಹಾವೇರಿ ಜಿಲ್ಲೆಯ ಇಜಾರಿಲಕಮಾಪುರದಲ್ಲಿ ಅಲೆಮಾರಿಗಳ ಗುಡಿಸಲುಗಳು ಗಾಳಿಗೆ ಹಾರಿಹೋಗಿವೆ. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರ ರಸ್ತೆ ಮೇಲೆ ಬಿದ್ದ ಪರಿಣಾಮ ಕೆಲಕಾಲ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹಾಗೂ ಹೊನ್ನಾವರ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande