
ಬಾಗಲಕೋಟೆ, 15 ಮೇ (ಹಿ.ಸ.) :
ಆಂಕರ್ : ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ನೀಟ್-ಯುಜಿ (NEET UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬಾಗಲಕೋಟೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದ ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು, ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಎಪಿಎಂಸಿ ಪ್ರದೇಶದಿಂದ ಆರಂಭವಾದ ಪ್ರತಿಭಟನೆ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪರೀಕ್ಷಾ ಸಂಸ್ಥೆಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಬಾರದು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾವಿರಾರು ವಿದ್ಯಾರ್ಥಿಗಳ ಕನಸುಗಳಿಗೆ ಧಕ್ಕೆ ಉಂಟುಮಾಡಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ದೊಡ್ಡ ಹೊಡೆತ ನೀಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಗೆ ಎಬಿವಿಪಿ ವಿಭಾಗ ಸಂಚಾಲಕ ಪ್ರಥಮೇಶ ವಾಘಮೋಡೆ ಹಾಗೂ ಜಿಲ್ಲಾ ಸಂಚಾಲಕ ವಿಪುಲ್ ಪೇಟ್ಕರ್ ನೇತೃತ್ವ ವಹಿಸಿದ್ದರು. ಈ ವೇಳೆ ಮಾತನಾಡಿದ ಮುಖಂಡರು, ದೇಶದ ಪ್ರಮುಖ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ನಲ್ಲಿ ನಡೆದಿರುವ ಅಕ್ರಮವು ವಿದ್ಯಾರ್ಥಿಗಳ ಪರಿಶ್ರಮ ಮತ್ತು ಪ್ರಾಮಾಣಿಕತೆಗೆ ಮಾಡಿದ ಅನ್ಯಾಯವಾಗಿದೆ ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ದೋಷಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಜೊತೆಗೆ ಪ್ರಕರಣದ ಕುರಿತು ನಿಷ್ಪಕ್ಷಪಾತ ಹಾಗೂ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ಸಂಬಂಧಿತ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂತ್ರಸ್ತ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು, ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆ ಹೆಚ್ಚಿಸುವ ಅಗತ್ಯವಿದೆ ಎಂದು ತಿಳಿಸಿದರು.
ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತರಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ರವಿ ದಂಡಗಿ, ಸುಮಾ, ತರುಣ್, ಬಸವರಾಜ್, ಕಾರ್ತಿಕ್, ಪುರುಷೋತ್ತಮ, ಸುದರ್ಶನ ಸೇರಿದಂತೆ ಅನೇಕ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೆಲಕಾಲ ನಗರದಲ್ಲಿ ಸಂಚಾರ ದಟ್ಟಣೆ ಉಂಟಾದರೂ, ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande