ಸೈಬರ್ ವಂಚನೆ ವಿರುದ್ಧ ಬಾಗಲಕೋಟೆ ಗ್ರಾಮೀಣ ಪೊಲೀಸರಿಂದ ಜಾಗೃತಿ ಅಭಿಯಾನ
ಬಾಗಲಕೋಟೆ, 16 ಮೇ (ಹಿ.ಸ.) : ಆಂಕರ್ : ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು, ಯುವಕರು
ಸೈಬರ್


ಬಾಗಲಕೋಟೆ, 16 ಮೇ (ಹಿ.ಸ.) :

ಆಂಕರ್ : ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ವತಿಯಿಂದ ವಿವಿಧ ಗ್ರಾಮಗಳಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮಸ್ಥರು, ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಿಗಳ ಮೋಸದ ತಂತ್ರಗಳ ಕುರಿತು ಮಾಹಿತಿ ನೀಡುವ ಮೂಲಕ ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದರು.

ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಗಿರೀಶ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಗಳಲ್ಲಿ ಸೈಬರ್ ವಂಚಕರು ಬಳಸುವ ವಿವಿಧ ತಂತ್ರಗಳು, ಸಾಮಾಜಿಕ ಜಾಲತಾಣಗಳ ದುರುಪಯೋಗ ಹಾಗೂ ವೈಯಕ್ತಿಕ ಮಾಹಿತಿಯ ಸುರಕ್ಷತೆ ಕುರಿತು ಜನರಿಗೆ ವಿವರವಾಗಿ ತಿಳಿಸಲಾಯಿತು.

ಈ ವೇಳೆ ಮಾತನಾಡಿದ ಪಿಎಸ್ಐ ಗಿರೀಶ್ ಅವರು, “ಇತ್ತೀಚಿನ ದಿನಗಳಲ್ಲಿ ಅಪರಿಚಿತ ಲಿಂಕ್ಗಳು, ಅನಾಮಿಕ ಕರೆಗಳು, ಫೇಕ್ ಮೆಸೇಜ್ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್ ವಂಚಕರು ಅಮಾಯಕರನ್ನು ಗುರಿಯಾಗಿಸಿಕೊಂಡು ಹಣ ದೋಚುತ್ತಿದ್ದಾರೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ವಾಟ್ಸಾಪ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳ ಮೂಲಕ ವೈಯಕ್ತಿಕ ಮಾಹಿತಿ ಸಂಗ್ರಹಿಸಿ ಬಳಿಕ ಬ್ಲ್ಯಾಕ್ಮೇಲ್ ಮಾಡುವ ಘಟನೆಗಳು ಹೆಚ್ಚುತ್ತಿವೆ” ಎಂದು ಹೇಳಿದರು.

ಜನರು ತಮ್ಮ ಬ್ಯಾಂಕ್ ಖಾತೆ ವಿವರಗಳು, ಓಟಿಪಿ ಸಂಖ್ಯೆ, ಆಧಾರ್ ಮಾಹಿತಿ, ಪಾಸ್ವರ್ಡ್ ಸೇರಿದಂತೆ ಯಾವುದೇ ವೈಯಕ್ತಿಕ ಮಾಹಿತಿಯನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು ಎಂದು ಅವರು ಎಚ್ಚರಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಅತಿಯಾದ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದು ಅಪಾಯಕಾರಿಯಾಗಿದ್ದು, ಸಾರ್ವಜನಿಕರು ಹೆಚ್ಚಿನ ಜಾಗರೂಕತೆ ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಮೇಲೆ ಮೊಬೈಲ್ ದುರುಪಯೋಗದ ಪರಿಣಾಮಗಳ ಕುರಿತು ಸಹ ಅರಿವು ಮೂಡಿಸಲಾಯಿತು. “ಚಿಕ್ಕ ಮಕ್ಕಳ ಕೈಯಲ್ಲಿ ನಿರಂತರವಾಗಿ ಮೊಬೈಲ್ ನೀಡುವುದರಿಂದ ಅವರ ಮಾನಸಿಕ ಹಾಗೂ ಸಾಮಾಜಿಕ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ. ಕೆಲವರು ಮೊಬೈಲ್ ಅನ್ನು ದುರುಪಯೋಗ ಮಾಡಿಕೊಂಡು ತಪ್ಪು ದಾರಿಯಲ್ಲಿ ಸಾಗುವ ಸಾಧ್ಯತೆಗಳೂ ಇವೆ. ಆದ್ದರಿಂದ ಪೋಷಕರು ಮಕ್ಕಳ ಚಟುವಟಿಕೆಗಳ ಮೇಲೆ ಗಮನ ಹರಿಸಿ, ಉತ್ತಮ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು” ಎಂದು ಗಿರೀಶ್ ಹೇಳಿದರು.

ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಈ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. ಅಪರಾಧ ಮುಕ್ತ ಹಾಗೂ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗ್ರಾಮ ವಾಸ್ತವ್ಯ, ಜಾಗೃತಿ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.

“ನಮ್ಮ ಎಸ್ಪಿ ಸಾಹೇಬರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ, ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಾರ್ವಜನಿಕರು ಯಾವುದೇ ಸೈಬರ್ ವಂಚನೆ ಅಥವಾ ಅಪರಾಧ ಚಟುವಟಿಕೆ ಗಮನಿಸಿದರೆ ತಕ್ಷಣವೇ 112 ತುರ್ತು ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು. ಸಾರ್ವಜನಿಕರ ಸುರಕ್ಷತೆಗೆ ಪೊಲೀಸ್ ಇಲಾಖೆ ಸದಾ ಬದ್ಧವಾಗಿದೆ” ಎಂದು ಪಿಎಸ್ಐ ಗಿರೀಶ್ ಹೇಳಿದರು.

ಗ್ರಾಮಸ್ಥರು ಕೂಡ ಪೊಲೀಸ್ ಇಲಾಖೆಯ ಈ ಜಾಗೃತಿ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಇಂತಹ ಕಾರ್ಯಕ್ರಮಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande