ಇದ್ದಲಗಿ ಗ್ರಾಮದಲ್ಲಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹಕ್ಕೆ ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಭೇಟಿ
ಬಾಗಲಕೋಟೆ, 16 ಮೇ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ಹಿನ್ನೀರು ಹಾಗೂ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರು ನಡೆಸುತ್ತಿರುವ ಅನಿರ್ದಿಷ್ಟ ಕಾಲದ ಶಾಂತಿಯುತ ಧರಣಿ ಸತ್ಯಾಗ್ರಹಕ್ಕೆ
ಧರಣಿ


ಬಾಗಲಕೋಟೆ, 16 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ಹಿನ್ನೀರು ಹಾಗೂ ಪ್ರವಾಹ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಗ್ರಾಮಸ್ಥರು ನಡೆಸುತ್ತಿರುವ ಅನಿರ್ದಿಷ್ಟ ಕಾಲದ ಶಾಂತಿಯುತ ಧರಣಿ ಸತ್ಯಾಗ್ರಹಕ್ಕೆ ಇಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಭೇಟಿ ನೀಡಿ ಸಂತ್ರಸ್ಥರ ಅಹವಾಲುಗಳನ್ನು ಆಲಿಸಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಅವರು ಗ್ರಾಮಸ್ಥರು ಎದುರಿಸುತ್ತಿರುವ ಸಂಕಷ್ಟಗಳನ್ನು ಸಮಗ್ರವಾಗಿ ವಿಚಾರಿಸಿ, ಹಲವು ವರ್ಷಗಳಿಂದ ಪ್ರವಾಹ ಮತ್ತು ಹಿನ್ನೀರು ಸಮಸ್ಯೆಯಿಂದ ಜನಜೀವನ ಅಸ್ತವ್ಯಸ್ತವಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಮನೆ, ಜಮೀನು, ಬೆಳೆ ಹಾಗೂ ಜೀವನೋಪಾಯ ಕಳೆದುಕೊಂಡಿರುವ ಸಂತ್ರಸ್ಥ ಕುಟುಂಬಗಳಿಗೆ ತಕ್ಷಣ ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದ್ದಲಗಿ ಗ್ರಾಮದ ಸಮಸ್ಯೆಗಳಿಗೆ ನ್ಯಾಯ ದೊರಕಿಸುವ ಹೋರಾಟದಲ್ಲಿ ಆರಂಭದಿಂದಲೂ ತಮ್ಮ ಬೆಂಬಲವಿದ್ದು, ಸಂತ್ರಸ್ಥರ ಪರವಾಗಿ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿರುವುದಾಗಿ ಅವರು ತಿಳಿಸಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದ್ದು, ಸರ್ಕಾರ ಕೂಡಲೇ ಸಮಸ್ಯೆಯ ಗಂಭೀರತೆಯನ್ನು ಅರಿತು ಶಾಶ್ವತ ಪರಿಹಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರು, ಹಿರಿಯರು ಹಾಗೂ ಮಹಿಳೆಯರು ತಮ್ಮ ನೋವುಗಳನ್ನು ಮಾಜಿ ಶಾಸಕರ ಮುಂದೆ ಹಂಚಿಕೊಂಡರು. ಅನೇಕ ವರ್ಷಗಳಿಂದ ಪ್ರವಾಹದ ಭೀತಿಯಲ್ಲಿ ಬದುಕುತ್ತಿರುವ ನಾವುಗಳಿಗೆ ಇನ್ನೂ ಸಮರ್ಪಕ ಪರಿಹಾರ ದೊರಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ ಅವರ ಭೇಟಿ ಸಂತ್ರಸ್ಥರಲ್ಲಿ ಹೊಸ ಭರವಸೆ ಮೂಡಿಸಿದ್ದು, ತಮ್ಮ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande