
ವಿಜಯಪುರ, 16 ಮೇ (ಹಿ.ಸ.) :
ಆಂಕರ್ : ಲೋಕೋಪಯೋಗಿ ಇಲಾಖೆಯ 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಿಂದ ಚಿಕ್ಕ ಸಿಂದಗಿ ಬೈಪಾಸ್ ವರೆಗೆ ನಿರ್ಮಿಸಲಾಗುತ್ತಿರುವ ಮೀಡಿಯನ್ (ಡಿವೈಡರ್) ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಅಧಿಕೃತ ಚಾಲನೆಯನ್ನು ಶಾಸಕ ಅಶೋಕ್ ಮನಗೂಳಿ ನೀಡಿದರು.
62 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಅಭಿವೃದ್ಧಿ ಕಾಮಗಾರಿ ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವುದರ ಜೊತೆಗೆ ರಸ್ತೆ ಸುರಕ್ಷತೆಗೆ ಸಹಕಾರಿಯಾಗಲಿದೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರು ಅಭಿಪ್ರಾಯಪಟ್ಟರು.
ನಗರದಲ್ಲಿ ದಿನದಿಂದ ದಿನಕ್ಕೆ ವಾಹನ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕಾಗಿ ಮೀಡಿಯನ್ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಈ ಯೋಜನೆ ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗಲಿದೆ ಎಂದು ತಿಳಿಸಿದರು.
ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನಪ್ರತಿನಿಧಿಗಳು ಹಾಗೂ ಮುಖಂಡರು, ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಜಾರಿಯಾಗುತ್ತಿದ್ದು, ರಸ್ತೆ, ಕುಡಿಯುವ ನೀರು, ಒಳಚರಂಡಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕೆಡಿಪಿ ಸದಸ್ಯರು, ವಿವಿಧ ಇಲಾಖೆಗಳ ನಾಮ ನಿರ್ದೇಶಿತ ಸದಸ್ಯರು, ಮಹಿಳಾ ಮುಖಂಡರು, ಹಿರಿಯ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು. ಸ್ಥಳೀಯ ಯುವಕರು ಮತ್ತು ನಾಗರಿಕರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಮಗಾರಿಗೆ ಸಂತಸ ವ್ಯಕ್ತಪಡಿಸಿದರು.
ನಗರದ ಪ್ರಮುಖ ರಸ್ತೆಯಾದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಿಂದ ಚಿಕ್ಕ ಸಿಂದಗಿ ಬೈಪಾಸ್ ವರೆಗೆ ನಡೆಯಲಿರುವ ಈ ಮೀಡಿಯನ್ ಕಾಮಗಾರಿಯಿಂದ ವಾಹನ ದಟ್ಟಣೆ ನಿಯಂತ್ರಣಕ್ಕೆ ಬರುವುದರ ಜೊತೆಗೆ ಅಪಘಾತಗಳ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ ಸರ್ಕಾರ ಕೈಗೊಂಡಿರುವ ಈ ಅಭಿವೃದ್ಧಿ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande