
ದಾವಣಗೆರೆ, 16 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ಪೊಲೀಸ್ ಸಿಬ್ಬಂದಿ ಇಲ್ಲವೆಂದು ಸಂಚಾರಿ ಸಿಗ್ನಲ್ ಉಲ್ಲಂಘನೆ ಮಾಡುವುದು ಬೇಜವಾಬ್ದಾರಿತನವಾಗಿದೆ. ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ಸುಮಾರು ೩೩ ಕೋಟಿ ರೂಪಾಯಿ ದಂಡದ ನೋಟಿಸ್ಗಳು ಜಾರಿಯಾಗಿವೆ ಎಂದು ತಿಳಿಸಿದರು.
ಸಭೆಯಲ್ಲಿ ದಲಿತ ಮುಖಂಡರು ಮಾತನಾಡಿ, ಪರಿಶಿಷ್ಟರ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಸ್ಮಶಾನ ಭೂಮಿ ಕೊರತೆ, ಸ್ಮಶಾನಗಳಿಗೆ ಮೂಲಸೌಕರ್ಯಗಳ ಅಭಾವ, ಬಗರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಣೆ ಸೇರಿದಂತೆ ಹಲವು ಸಮಸ್ಯೆಗಳಿವೆ ಎಂದು ಗಮನ ಸೆಳೆದರು.
ಹೊನ್ನಾಳಿ ಶಾಲಾ ಆವರಣದಲ್ಲಿ ಕಿಡಿಗೇಡಿಗಳು ಮದ್ಯಪಾನ ಮಾಡುತ್ತಿರುವ ಬಗ್ಗೆ ದೂರು ನೀಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಚನ್ನಗಿರಿಯ ಹಟ್ಟಿ ಗ್ರಾಮದ ಎ.ಕೆ. ಕಾಲೋನಿಯ ಜನರ ಶೋಷಣೆ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕಂಸಾಗರದಲ್ಲಿ ಸ್ಮಶಾನ ಭೂಮಿ ಒದಗಿಸುವಂತೆ ಮನವಿ ಮಾಡಲಾಯಿತು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ ಎಂದು ಕೆಲವರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ, ಈ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಸೂಳೆಕೆರೆ ಸುತ್ತಮುತ್ತ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಮನವಿ ಮಾಡಲಾಯಿತು. ಖಾಸಗಿ ಶಾಲೆಗಳಲ್ಲಿ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಹರಿಹರ ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಸಮರ್ಪಕ ಔಷಧಿ ನೀಡುತ್ತಿಲ್ಲ ಎಂದು ದೂರು ಕೇಳಿಬಂತು. ಅಲ್ಲದೆ ಗುರುಭವನದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಸ್ವಚ್ಛಗೊಳಿಸುವಂತೆ ಹಾಗೂ ಹರಿಹರ ರೈಲ್ವೆ ಸೇತುವೆ ಸಮೀಪದ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಮನವಿ ಮಾಡಲಾಯಿತು.
ಮಾಯಕೊಂಡ ಸುತ್ತಮುತ್ತ ಲೈಸೆನ್ಸ್ ಇಲ್ಲದೆ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಅಬಕಾರಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.