
ದಾವಣಗೆರೆ, 16 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕು. ಶಿಕ್ಷಕರು ಹಾಗೂ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಿಗೆ ಪೋಕ್ಸೊ ಕಾಯ್ದೆ, ಮಕ್ಕಳ ಹಕ್ಕುಗಳು ಮತ್ತು ಅಂತರ್ಜಾಲ ವಂಚನೆಗಳ ಕುರಿತು ಸಮಗ್ರ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ವಿಡಿಯೋ ಸಂವಾದದ ಮೂಲಕ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತಂತ್ರಜ್ಞಾನ ಆಧಾರಿತ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ತಂತ್ರಾಂಶ ತಂತ್ರಜ್ಞಾನ ಉದ್ಯಾನ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ. ಎಂ.. ಮಾಹಿತಿ ನೀಡಿ, ಯೋಜನೆಗಾಗಿ ಸುಮಾರು ೨೦ ಕೋಟಿ ರೂಪಾಯಿ ಅನುದಾನ ಕೋರಲಾಗಿದೆ. ಮೊದಲ ಹಂತದಲ್ಲಿ ೧೦ ಕೋಟಿ ರೂಪಾಯಿ ಬಿಡುಗಡೆಯಾದರೇ ಕೂಡಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಶಾಲೆ-ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೂ, ಹೊಸ ಶೈಕ್ಷಣಿಕ ವರ್ಷದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ತಿಂಗಳು ವಿದ್ಯಾರ್ಥಿ ನಿಲಯಗಳಲ್ಲಿ ವಚನ ಸಾಹಿತ್ಯ, ದಲಿತ ಸಾಹಿತ್ಯ ಹಾಗೂ ಮಹಿಳಾ ಸಾಹಿತ್ಯ ಕುರಿತ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳಿಂದ ಸಂಸದರ ನೇತೃತ್ವದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಬಾಡಿಗೆ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಜಾಗಗಳನ್ನು ಮಂಜೂರು ಮಾಡಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಕಟ್ಟಡ ನಿರ್ಮಾಣ ಆರಂಭವಾಗಲಿದೆ ಎಂದು ಹೇಳಿದರು.
ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಆರೋಗ್ಯ ಚೀಟಿ ವಿತರಿಸಲಾಗುತ್ತಿದ್ದು, ಪ್ರತಿ ತಿಂಗಳು ಕಡ್ಡಾಯ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ವಿಶೇಷ ಕ್ರಮ ಕೈಗೊಂಡಿದೆ. ಹಿಂದುಳಿದ ಶಾಲೆಗಳನ್ನು ಅಧಿಕಾರಿಗಳು ದತ್ತು ಪಡೆದು ನಿರಂತರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ಯಾವುದೇ ಬಾಲ್ಯವಿವಾಹ ಪ್ರಕರಣ ದಾಖಲಾಗಿರಲಿಲ್ಲ. ಆದರೆ ಕಳೆದ ತಿಂಗಳು ಮದುವೆ ಮಂಟಪದಲ್ಲಿ ನಡೆಯುತ್ತಿದ್ದ ಬಾಲ್ಯವಿವಾಹವನ್ನು ದಾಳಿ ನಡೆಸಿ ತಡೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲೆಯ ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.
ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ೧೦೦ ರಷ್ಟು ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ಪ್ರಕರಣಗಳು ಕಂಡುಬಂದ ಹಿನ್ನೆಲೆ ವೈದ್ಯರ ಸಭೆ ನಡೆಸಿ ಸಹಜ ಹೆರಿಗೆಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ರಾಜ್ಯ ಸರಾಸರಿಗಿಂತ ಕಡಿಮೆಯಾಗಿದ್ದು, ಇದು ಜಿಲ್ಲೆಯ ಪ್ರಮುಖ ಸಾಧನೆ ಎಂದು ಹೇಳಿದರು.
ಕೃಷಿ ಇಲಾಖೆಯು ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಂಗ್ರಹ ಮಾಡಿಟ್ಟಿದೆ. ಅಡಿಕೆ, ತೆಂಗು ಸೇರಿದಂತೆ ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ಕೊಳವೆ ಮಾರ್ಗ ಹಾಗೂ ಮನೆಮನೆಗೆ ನೀರಿನ ಸಂಪರ್ಕ ಕಾಮಗಾರಿ ಅಂತಿಮ ಹಂತದಲ್ಲಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಂಜಿನಿಯರ್ಗಳಿಗೆ ಸೂಚಿಸಲಾಗಿದೆ ಎಂದರು.
ನಗರದ ಪ್ರಮುಖ ರಸ್ತೆಗಳ ಅಭಿವೃದ್ಧಿ, ಸ್ಮಾರ್ಟ್ ರಸ್ತೆ ನಿರ್ಮಾಣ ಹಾಗೂ ಒಳಚರಂಡಿ ಆಧುನೀಕರಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೀದಿನಾಯಿಗಳ ನಿಯಂತ್ರಣಕ್ಕಾಗಿ ಲಸಿಕೆ ಹಾಗೂ ಸಂತಾನೋತ್ಪತ್ತಿ ನಿಯಂತ್ರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದ್ದು, ಈಗಾಗಲೇ ಶೇಕಡಾ ೮೦ ರಷ್ಟು ಯಶಸ್ಸು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್. ಟಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.