ಶಿಕ್ಷಣವೇ ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಅಡಿಪಾಯ : ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ, 17 ಮೇ (ಹಿ.ಸ.) : ಆ್ಯಂಕರ್ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಚಿವ ಸತೀಶ್ ಜಾರಕಿಹೊಳಿ ಸನ್ಮಾನಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿ ಮತ್ತು ಚಿಕ್ಕೋಡ
Honour


ಬೆಳಗಾವಿ, 17 ಮೇ (ಹಿ.ಸ.) :

ಆ್ಯಂಕರ್ : ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಚಿವ ಸತೀಶ್ ಜಾರಕಿಹೊಳಿ ಸನ್ಮಾನಿಸಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವಿದ್ಯಾರ್ಥಿಗಳ ಸಾಧನೆ ಇಡೀ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಶಿಕ್ಷಣದ ಮೂಲಕವೇ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಕೌಶಲ್ಯ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಕೂಡ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಹಾಗೂ ಬಡ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ದೆಹಲಿಯಲ್ಲಿ ವಿಶೇಷ ತರಬೇತಿ ಕೇಂದ್ರದ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯ ಪ್ರತಿಯೊಂದು ತಾಲೂಕಿನ ವಿದ್ಯಾರ್ಥಿಗಳಿಗೆ ಇದರ ಸೌಲಭ್ಯ ದೊರೆಯಲಿದೆ ಎಂದರು.

ಯಮಕನಮರಡಿ, ಹಾರೂಗೇರಿ ಹಾಗೂ ಗೋಕಾಕದಲ್ಲಿ ಹೈಟೆಕ್ ಗ್ರಂಥಾಲಯಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಸರ್ಕಾರಿ ಶಾಲೆಗಳನ್ನು ಹೈಟೆಕ್ ಶಾಲೆಗಳಾಗಿ ಪರಿವರ್ತಿಸುವ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಹೇಳಿದರು. ಜಿಲ್ಲೆಯ ಪ್ರತಿಯೊಬ್ಬ ವಿದ್ಯಾರ್ಥಿಯೂ ಭವಿಷ್ಯದಲ್ಲಿ ಅಧಿಕಾರಿ, ವೈದ್ಯ, ಇಂಜಿನಿಯರ್ ಹಾಗೂ ವಿಜ್ಞಾನಿಗಳಾಗಿ ದೇಶಕ್ಕೆ ಮಾದರಿಯಾಗಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಅದೇ ರೀತಿ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ಸಾಧನೆಗೈದ ಬಸವರಾಜ ಕೆಂಪವಾಡ, ಕಿರಣ್ ಕಮತೆ, ರಾಹುಲ್ ಪಾಟೀಲ ಹಾಗೂ ಬಸವರಾಜ ಎಂ. ಪಾಟೀಲ ಅವರನ್ನು ಸನ್ಮಾನಿಸಿ, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande