ಗದಗದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆ
ಗದಗ, 17 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಭಾನುವಾರ ಸಂಜೆ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಗದಗ–ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು ಒಂದು ಗಂಟೆಗೂ ಅ
ಫೋಟೋ


ಗದಗ, 17 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಭಾನುವಾರ ಸಂಜೆ ಹಲವೆಡೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಗದಗ–ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತು.

ಸಂಜೆ ವೇಳೆಗೆ ಏಕಾಏಕಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಗುಡುಗು–ಸಿಡಿಲಿನ ಅಬ್ಬರದ ನಡುವೆ ಭಾರಿ ಮಳೆ ಸುರಿಯಿತು. ಬಿರುಗಾಳಿಯಿಂದ ರಸ್ತೆಗಳ ಮೇಲೆ ಧೂಳು ಆವರಿಸಿದ್ದು, ಬಳಿಕ ಆರಂಭವಾದ ಮಳೆಯಿಂದ ನಗರ ಭಾಗದ ರಸ್ತೆಗಳಲ್ಲಿ ನೀರು ಹರಿಯುವ ದೃಶ್ಯ ಕಂಡುಬಂತು.

ಭಾರಿ ಮಳೆಯ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹಲವರು ಅಂಗಡಿ ಮುಂಗಟ್ಟು ಹಾಗೂ ಶೆಡ್ಗಳ ಆಶ್ರಯ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಕೆಲವೆಡೆ ವಾಹನ ಸಂಚಾರಕ್ಕೂ ತಾತ್ಕಾಲಿಕ ಅಡಚಣೆ ಉಂಟಾಯಿತು.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ತಾಪಮಾನ ಏರಿಕೆಯಾಗಿದ್ದು, ತೀವ್ರ ಬಿಸಿಲಿನಿಂದ ಜನರು ಹೈರಾಣಾಗಿದ್ದರು.

ಇಂತಹ ಸಂದರ್ಭದಲ್ಲಿ ಸುರಿದ ಮಳೆ ಜನರಿಗೆ ನಿರಾಳತೆ ತಂದಿದೆ. ತಂಪಾದ ವಾತಾವರಣ ನಿರ್ಮಾಣವಾಗಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನೊಂದೆಡೆ, ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಸಜ್ಜಾಗಿರುವ ರೈತರಲ್ಲಿ ಮಳೆ ಹೊಸ ಉತ್ಸಾಹ ಮೂಡಿಸಿದೆ. ಮಳೆಯ ಆಗಮನದಿಂದ ಭೂಮಿ ತೇವಾಂಶ ಪಡೆದುಕೊಂಡಿದ್ದು, ಬಿತ್ತನೆ ಕಾರ್ಯಕ್ಕೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.

ಮುಂಗಾರು ಹಂಗಾಮಿನ ಬಿತ್ತನೆಗೆ ಸಿದ್ಧತೆ ನಡೆಸುತ್ತಿದ್ದ ರೈತರು ಉತ್ತಮ ಮಳೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ, ಗದಗ ಜಿಲ್ಲೆಯ ಹಲವೆಡೆ ಸುರಿದ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆ ಒಂದು ಕಡೆ ಜನರಿಗೆ ತಂಪಿನ ಅನುಭವ ನೀಡಿದರೆ, ಮತ್ತೊಂದು ಕಡೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande