
ಬಳ್ಳಾರಿ, 17 ಮೇ (ಹಿ.ಸ.) :
ಆ್ಯಂಕರ್ : ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಮೇ 18ರಿಂದ 25ರವರೆಗೆ ‘ಜನ ಭಾಗಿದಾರಿ – ಸಬ್ಸೇ ದೂರ್, ಸಬ್ಸೇ ಪೆಹ್ಲೆ’ ಐಇಸಿ (ಮಾಹಿತಿ, ಶಿಕ್ಷಣ ಮತ್ತು ಸಂವಹನ) ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೊದಿನ್ ಅವರು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಮತ್ತು ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಗಳ ಅಡಿಯಲ್ಲಿ ಈ ಅಭಿಯಾನ ನಡೆಯಲಿದೆ. ಗ್ರಾಮ ಮಟ್ಟದಲ್ಲಿ ಜಾಗೃತಿ ಶಿಬಿರಗಳು ಅಭಿಯಾನದ ಅಂಗವಾಗಿ ಜಿಲ್ಲೆಯ ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಲಾಗುವುದು. ಜೊತೆಗೆ ‘ಪ್ರಯೋಜನ ಸ್ಯಾಚುರೇಷನ್’ (ಸೌಲಭ್ಯ ಸಂಪೂರ್ಣತೆ) ಶಿಬಿರಗಳನ್ನು ಆಯೋಜಿಸುವ ಮೂಲಕ ಅರ್ಹ ಬುಡಕಟ್ಟು ಸಮುದಾಯದ ಜನರಿಗೆ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬುಡಕಟ್ಟು ಸಮುದಾಯದವರು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯವಿರುವ ದಾಖಲೆಗಳನ್ನು ಒದಗಿಸುವುದು. ಸಂಬಂಧಿತ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲೇ ಅಗತ್ಯ ಸೇವೆಗಳನ್ನು ಕಲ್ಪಿಸುವುದು. ಗರಿಷ್ಠ ಸಂಖ್ಯೆಯ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಮಾಡುವುದು ಅಭಿಯಾನದ ಪ್ರಮುಖ ಉದ್ದೇಶಗಳಾಗಿವೆ ಎಂದು ಅವರು ತಿಳಿಸಿದ್ದಾರೆ.
ಈ ಮಹತ್ವದ ಅಭಿಯಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಈಗಾಗಲೇ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಬುಡಕಟ್ಟು ಸಮುದಾಯದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರಗಳಲ್ಲಿ ಭಾಗವಹಿಸಿ, ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್