
ಶಿವಮೊಗ್ಗ, 17 ಮೇ (ಹಿ.ಸ.) :
ಆ್ಯಂಕರ್ : ಸೊರಬ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ರಸ್ತೆ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಸುಮಾರು ₹30 ಲಕ್ಷ ವೆಚ್ಚದಲ್ಲಿ ಸೊರಬ-ಹೊಸಬಾಳೆ ರಸ್ತೆಯಿಂದ ಕಾಸರಗುಪ್ಪೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಭಾನುವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಸೊರಬ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಉತ್ತಮ ರಸ್ತೆ ಸಂಪರ್ಕ ಒದಗಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಹಂತ ಹಂತವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಕಾಸರಗುಪ್ಪೆ ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ಈ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಗ್ರಾಮಕ್ಕೆ ಸುಗಮ ಸಂಪರ್ಕ ಕಲ್ಪಿಸಲಿದ್ದು, ಕೃಷಿ ಚಟುವಟಿಕೆಗಳು, ವ್ಯಾಪಾರ ವ್ಯವಹಾರಗಳು ಹಾಗೂ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದ ರೀತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಭೂಮಿಪೂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / Rakesh.M.B.