ಅಕಾಲಿಕ ಮಳೆಯಿಂದ ಬೆಳೆ ನಾಶ ; ಸರ್ಕಾರದ ನಿರ್ಲಕ್ಷ್ಯಕ್ಕೆ ಅಶೋಕ ಆಕ್ರೋಶ
ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ
Ashok


ಬೆಂಗಳೂರು, 18 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು

ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, “ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಕಾಲಿಕ ಮಳೆ ಮತ್ತು ಬಿರುಗಾಳಿಯಿಂದ 11 ಜಿಲ್ಲೆಗಳ 2,659 ಹೆಕ್ಟೇರ್ಗಿಂತಲೂ ಹೆಚ್ಚು ಪ್ರದೇಶದ ಬೆಳೆ ನಾಶವಾಗಿದೆ. ಅಡಿಕೆ, ತೆಂಗು, ಬಾಳೆ, ಮಾವು, ಟೊಮ್ಯಾಟೊ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆದ ಅನ್ನದಾತರು ಕಂಗಾಲಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಇನ್ನೂ ಕುಂಭಕರ್ಣ ನಿದ್ದೆಯಲ್ಲಿದೆ” ಎಂದು ಆರೋಪಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ 1,235 ಹೆಕ್ಟೇರ್, ಕೋಲಾರದಲ್ಲಿ 832 ಹೆಕ್ಟೇರ್, ಬೆಳಗಾವಿಯಲ್ಲಿ 324 ಹೆಕ್ಟೇರ್ ಹಾಗೂ ಕೊಪ್ಪಳದಲ್ಲಿ 100 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಬೆಳೆದ ಬೆಳೆಗಳು ಮಳೆಯಿಂದ ಹಾಳಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಸಿಡಿಲು ಬಡಿದು ಮೂವರು ಮೃತಪಟ್ಟಿರುವ ಘಟನೆಗಳನ್ನೂ ಉಲ್ಲೇಖಿಸಿರುವ ಅಶೋಕ್, “ಇಷ್ಟೊಂದು ಅನಾಹುತ ಸಂಭವಿಸಿದ್ದರೂ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರ ನೋವು ಕೇಳಬೇಕಾದ ಸಚಿವರು ಮತ್ತು ಅಧಿಕಾರಿಗಳು ಎಸಿ ಕೊಠಡಿಗಳಿಂದ ಹೊರಬರುತ್ತಿಲ್ಲ” ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ಕಂದಾಯ, ಕೃಷಿ ಹಾಗೂ ತೋಟಗಾರಿಕಾ ಇಲಾಖೆಗಳ ಕಾರ್ಯಕ್ಷಮತೆಯ ಮೇಲೂ ಪ್ರಶ್ನೆ ಎತ್ತಿರುವ ಅವರು, “ಸರ್ಕಾರ ಬೆಂಗಳೂರಿನಲ್ಲಿ ಕುರ್ಚಿ ಕಾಳಗದಲ್ಲೇ ತೊಡಗಿಸಿಕೊಂಡಿದೆ. ರೈತರ ಸಂಕಷ್ಟದ ಬಗ್ಗೆ ಯಾವುದೇ ಕಾಳಜಿ ತೋರಿಸುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ಅಶೋಕ್, ತಕ್ಷಣ ಜಂಟಿ ಸಮೀಕ್ಷೆ ನಡೆಸಿ ಬೆಳೆ ಹಾನಿಯ ವರದಿ ಸಿದ್ಧಪಡಿಸಬೇಕು, ರೈತರಿಗೆ ಹೆಕ್ಟೇರ್ ಆಧಾರದ ಮೇಲೆ ಗರಿಷ್ಠ ಪರಿಹಾರ ನೀಡಬೇಕು ಹಾಗೂ ಸಿಡಿಲಿಗೆ ಬಲಿಯಾದವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಸರ್ಕಾರ ಇನ್ನೂ ನಿರ್ಲಕ್ಷ್ಯ ಮುಂದುವರಿಸಿದರೆ ರೈತರ ಪರವಾಗಿ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande