
ಧಾರವಾಡ, 19 ಮೇ (ಹಿ.ಸ.) :
ಆ್ಯಂಕರ್ : ಸರ್ಕಾರದ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ನೊಂದ ಮಹಿಳೆಯರಿಗೆ ನ್ಯಾಯ ದೊರೆಯಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು.
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಹಿಳಾ ಸ್ಪಂದನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಎಲ್ಲಾ ಇಲಾಖೆಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಅಧಿಕಾರಿಗಳು ಮಾತೃ ಹೃದಯದಿಂದ ಕರ್ತವ್ಯ ನಿರ್ವಹಿಸಿದಾಗ ನೊಂದ ಮಹಿಳೆಯರ ಬದುಕಿನಲ್ಲಿ ನ್ಯಾಯ ಮತ್ತು ಆಶಾಕಿರಣ ಮೂಡುತ್ತದೆ ಎಂದು ಹೇಳಿದರು.
ಮಹಿಳೆಯರ ಸುರಕ್ಷತೆ ಹಾಗೂ ಸೈಬರ್ ಜಾಗೃತಿ ಕುರಿತು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ಹೋಟೆಲ್ಗಳು ಹಾಗೂ ರೆಸ್ಟೋರೆಂಟ್ಗಳಲ್ಲಿ ‘ಶೀ ಬಾಕ್ಸ್’ ಅಳವಡಿಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳನ್ನು ತಡೆಗಟ್ಟಲು ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಪೊಲೀಸ್ ಅಧಿಕಾರಿಗಳು ಸಂವೇದನಾಶೀಲವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.
ಶೀ ಬಾಕ್ಸ್ ಮತ್ತು ಸ್ಥಳೀಯ ದೂರು ನಿವಾರಣಾ ಸಮಿತಿಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಮಹಿಳೆಯರು ಧೈರ್ಯವಾಗಿ ದೂರು ನೀಡಲು ಸಮಾಜದಲ್ಲಿ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಅಕ್ಕಾ ಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರ ರಕ್ಷಣೆ ಹಾಗೂ ಜಾಗೃತಿಯಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಪ್ರಶಂಸಿಸಿದ ಅವರು, ಸದಸ್ಯರೊಂದಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡಿಜಿಟಲ್ ಸುರಕ್ಷತೆ, ಆನ್ಲೈನ್ ವಂಚನೆ ಹಾಗೂ ಸಾಮಾಜಿಕ ಜಾಲತಾಣಗಳ ದುರುಪಯೋಗ ಕುರಿತು ನಿಯಮಿತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ತಿಳಿಸಿದರು.
ಶಾಲೆಗಳು, ಕಾಲೇಜುಗಳು, ಬಸ್ ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳಾ ಸಹಾಯವಾಣಿ, ಪೊಲೀಸ್ ಠಾಣೆ ಮತ್ತು ಹೆಲ್ಪ್ಲೈನ್ ಸಂಖ್ಯೆಗಳ ಮಾಹಿತಿ ಫಲಕ ಅಳವಡಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್ ಮಾತನಾಡಿ, ಮಹಿಳೆಯರ ಸುರಕ್ಷತೆ ಹಾಗೂ ಮಕ್ಕಳ ಕಲ್ಯಾಣದ ನಿಟ್ಟಿನಲ್ಲಿ ಜಿಲ್ಲಾಡಳಿತವು ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಬದಲಿಗೆ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ಗಳ ಮೂಲಕವೇ ಮಹಿಳೆಯರು ಸಾಲ ಪಡೆಯಬೇಕು. ಅತಿಯಾದ ಬಡ್ಡಿದರ ಮತ್ತು ಒತ್ತಡದ ವಸೂಲಾತಿಯಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇರುವುದರಿಂದ ಸಾಲ ಪಡೆಯುವ ಮೊದಲು ಎಲ್ಲಾ ನಿಯಮಗಳನ್ನು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಕಾಣೆಯಾದವರ ಪತ್ತೆ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು. ಡ್ರಗ್ಸ್ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಶಾಲೆ ಮತ್ತು ಕಾಲೇಜುಗಳ ಸುತ್ತ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತೆ ಶೃತಿ ಎನ್.ಎಸ್. ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಹಾಗೂ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.