ಮಳೆ ಅವಾಂತರಕ್ಕೆ ನಗರಸಭೆ-ಹೆಸ್ಕಾಂ ನಿರ್ಲಕ್ಷ್ಯ ಕಾರಣ : ಇಮ್ಮಿಯಾಜ್ ಮಾನ್ವಿ ಆರೋಪ
ಗದಗ, 19 ಮೇ (ಹಿ.ಸ.) : ಆ್ಯಂಕರ್ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಅವಾಂತರಗಳಿಗೆ ನಗರಸಭೆ ಮತ್ತು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ಮಿಯಾಜ್ ಆರ್. ಮಾನ್ವಿ ಆರೋಪಿಸಿ
ಫೋಟೋ


ಗದಗ, 19 ಮೇ (ಹಿ.ಸ.) :

ಆ್ಯಂಕರ್ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಉಂಟಾದ ಅವಾಂತರಗಳಿಗೆ ನಗರಸಭೆ ಮತ್ತು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ಮಿಯಾಜ್ ಆರ್. ಮಾನ್ವಿ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಳೆಗಾಲ ಆರಂಭವಾದಾಗಲೆಲ್ಲ ನಗರದಲ್ಲಿ ಮರಗಳು ಧರೆಗುರುಳುವುದು, ವಿದ್ಯುತ್ ಕಂಬಗಳು ಉರುಳಿಬೀಳುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎತಡು ದಿನಗಳಿಂದ ಹೆಚ್ಚು ಕಾಲ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯಿಂದ ನಗರದ ಅನೇಕ ಕಡೆಗಳಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದ ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರು ಮತ್ತು ವಾಹನ ಸವಾರರು ಭಯಭೀತರಾಗಿ ಪರದಾಡುವಂತಾಯಿತು ಎಂದು ತಿಳಿಸಿದ್ದಾರೆ.

ಗದಗದಿಂದ ಬೆಟಗೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳ ಮೇಲೂ ಮಳೆ ಬಂದಾಗಲೆಲ್ಲ ನೀರು ತುಂಬಿಕೊಳ್ಳುತ್ತಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ಅಂಡರ್ಬ್ರಿಡ್ಜ್ ಹಾಗೂ ಬಳ್ಳಾರಿ ಬ್ರಿಡ್ಜ್ ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದ್ದಾರೆ.

ಇನ್ನು ಹಲವು ಪ್ರದೇಶಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ವಾಹನಗಳ ಮೇಲೆ ಬಿದ್ದ ಪರಿಣಾಮ ವಾಹನಗಳು ಜಖಂಗೊಂಡಿವೆ.

ಸರ್ಕಾರವು ಅವಳಿ ನಗರದ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ರಸ್ತೆ ಮತ್ತು ಮೂಲಸೌಕರ್ಯಗಳ ಸ್ಥಿತಿ ಸುಧಾರಿಸಿಲ್ಲ ಎಂದು ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಎದುರಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರವಾಗಿ ಮೇಲುಸೇತುವೆ ನಿರ್ಮಾಣ ಮಾಡುವಂತೆ ಹಲವು ಬಾರಿ ಹೋರಾಟ ನಡೆಸಿದ್ದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಇಮ್ಮಿಯಾಜ್ ಮಾನ್ವಿ ಹೇಳಿದ್ದಾರೆ.

ಜಿಲ್ಲಾಡಳಿತ, ಜನಪ್ರತಿನಿಧಿಗಳು ಹಾಗೂ ನಗರಸಭೆ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು. ಮಳೆಗಾಲದಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಮುಂಚಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande