
ಧಾರವಾಡ, 19 ಮೇ (ಹಿ.ಸ.) :
ಆ್ಯಂಕರ್ : ಜೂನ್ 28ರಿಂದ ಜುಲೈ 1ರವರೆಗೆ ಧಾರವಾಡ ಜಿಲ್ಲೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಸಮರ್ಪಕವಾಗಿ ಮತ್ತು ಯಶಸ್ವಿಯಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಹಾಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿರೋದಿಂದ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೂನ್ 28ರಂದು ಬೂತ್ ಮಟ್ಟದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಜೂನ್ 29 ಮತ್ತು 30ರಂದು ಗ್ರಾಮೀಣ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಕಾರ್ಯಕರ್ತರು ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದಾರೆ. ನಗರ ಪ್ರದೇಶಗಳಲ್ಲಿ ಜೂನ್ 29ರಿಂದ ಜುಲೈ 1ರವರೆಗೆ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಐದು ವರ್ಷದೊಳಗಿನ 2,07,837 ಮಕ್ಕಳು ಗುರುತಿಸಲ್ಪಟ್ಟಿದ್ದು, ಇವರಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಕಾರ್ಯಕ್ರಮಕ್ಕಾಗಿ ಒಟ್ಟು 891 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 92 ಟ್ರಾಂಜಿಟ್ ತಂಡಗಳು ಹಾಗೂ 57 ಮೊಬೈಲ್ ತಂಡಗಳು ಕಾರ್ಯನಿರ್ವಹಿಸಲಿದ್ದು, 3,829 ವ್ಯಾಕ್ಸಿನೇಟರ್ಗಳು ಮತ್ತು 214 ಮೇಲ್ವಿಚಾರಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಒಟ್ಟು 4,28,540 ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ಗುನ್ಯಾ ಸೇರಿದಂತೆ ಕೀಟಜನ್ಯ ರೋಗಗಳ ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಸಭೆಯೂ ನಡೆಯಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.