
ಬಾಗಲಕೋಟೆ 2 ಮೇ (ಹಿ.ಸ.) :
ಆಂಕರ್ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸುರಕ್ಷಿತವಾಗಿ ಪ್ರಯಾಣಿಸಬೇಕು ಎಂಬ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಾಗಲಕೋಟೆಯಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.
ಹೆಲ್ಮೆಟ್ ಧರಿಸುವುದು ಕೇವಲ ಕಾನೂನು ಪಾಲನೆಯ ವಿಷಯವಲ್ಲ, ಅದು ವ್ಯಕ್ತಿಯ ಜೀವ ಮತ್ತು ಕುಟುಂಬದ ಭವಿಷ್ಯವನ್ನು ರಕ್ಷಿಸುವ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು, ರಸ್ತೆ ಅಪಘಾತಗಳಲ್ಲಿ ತಲೆಗಾಯಗಳೇ ಹೆಚ್ಚು ಜೀವಹಾನಿಗೆ ಕಾರಣವಾಗುತ್ತವೆ. ಸರಿಯಾದ ಗುಣಮಟ್ಟದ ಹೆಲ್ಮೆಟ್ ಧರಿಸುವುದರಿಂದ ಅಪಘಾತದ ಸಂದರ್ಭದಲ್ಲಿ ಜೀವ ಉಳಿಯುವ ಸಾಧ್ಯತೆ ಹೆಚ್ಚುತ್ತದೆ ಎಂದು ಹೇಳಿದರು. ಯುವಕರು ಮತ್ತು ವಿದ್ಯಾರ್ಥಿಗಳು ವಿಶೇಷವಾಗಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದರು.
ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿಾಗ ನಡೆದ ಅಭಿಯಾನದಲ್ಲಿ ವಾಹನ ಸವಾರರಿಗೆ ಹೆಲ್ಮೆಟ್ ಮಹತ್ವದ ಕುರಿತು ತಿಳುವಳಿಕೆ ನೀಡಲಾಗಿದ್ದು, ಹೆಲ್ಮೆಟ್ ಧರಿಸದವರಿಗೆ ಎಚ್ಚರಿಕೆ ನೀಡಲಾಯಿತು.
ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದರು.
ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಸುರಕ್ಷಿತ ಪ್ರಯಾಣವೇ ಮುಖ್ಯ ಎಂಬ ಸಂದೇಶವನ್ನು ಅಭಿಯಾನದಲ್ಲಿ ಒತ್ತಿ ಹೇಳಲಾಯಿತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande