ಮೇ 4ರಂದು ತೋವಿವಿಯಲ್ಲಿ ಮತ ಎಣಿಕೆ : ಮೊಬೈಲ್ ಫೋನ್ ನಿರ್ಬಂಧ
ನಿಷೇಧಾಜ್ಞೆ
ಮತದಾನ


ವಿಜಯಪುರ, 02 ಮೇ (ಹಿ.ಸ.) :

ಆಂಕರ್ : ಬಾಗಲಕೋಟೆ ವಿಧಾನ ಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದ್ದು, ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಎಣಿಕೆ ಪ್ರಕ್ರಿಯೆ ಸುಗಮವಾಗಿ ನಡೆಯಲು ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು. ಅಭ್ಯರ್ಥಿಗಳು, ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರುಗಳು ಬೆಳಿಗ್ಗೆ 7 ಗಂಟೆಗೆ ಹಾಜರಾಗಬೇಕು. ಭದ್ರತಾ ಕೊಠಡಿಯನ್ನು ಅದೇ ಸಮಯದಲ್ಲಿ ಚುನಾವಣಾ ವೀಕ್ಷಕರು, ಅಭ್ಯರ್ಥಿಗಳು ಮತ್ತು ಏಜೆಂಟರ ಸಮ್ಮುಖದಲ್ಲಿ ತೆರೆಯಲಾಗುತ್ತದೆ ಎಂದು ತಿಳಿಸಿದರು.

ಇವಿಎಂ ಮತ ಎಣಿಕೆಗಾಗಿ ನೆಲ ಮಹಡಿಯ ಕೊಠಡಿ ಸಂಖ್ಯೆ 4ರಲ್ಲಿ 14 ಟೇಬಲ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಂಚೆ ಮತಪತ್ರಗಳ ಎಣಿಕೆ ಹಾಗೂ ಇಟಿಪಿಬಿಎಸ್ ಸ್ಕ್ಯಾನಿಂಗ್ಗಾಗಿ ಪ್ರತ್ಯೇಕ ಟೇಬಲ್ಗಳನ್ನು ಕಲ್ಪಿಸಲಾಗಿದೆ. ಪ್ರತಿ ಟೇಬಲ್ಗೆ ಎಣಿಕೆ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ಅಬ್ಸರ್ವರ್ ನೇಮಕ ಮಾಡಲಾಗಿದ್ದು, ಒಟ್ಟು 63 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರತಿ ಸುತ್ತಿನ ಮತ ಎಣಿಕೆಯ ಮಾಹಿತಿಯನ್ನು ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಮೂಲಕ ಪ್ರಕಟಿಸಲಾಗುತ್ತದೆ ಎಂದು ಹೇಳಿದರು.ಅಭ್ಯರ್ಥಿಗಳು ಹಾಗೂ ಏಜೆಂಟರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯ ದ್ವಾರದಿಂದ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮತ ಎಣಿಕೆ ಸಿಬ್ಬಂದಿ ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಮುಖ್ಯ ದ್ವಾರದಿಂದ ಪ್ರವೇಶವಿರುತ್ತದೆ. ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಿಷೇಧಾಜ್ಞೆ ಜಾರಿ

ಮೇ 4ರ ಬೆಳಿಗ್ಗೆ 6 ಗಂಟೆಯಿಂದ ಮೇ 5ರ ಬೆಳಿಗ್ಗೆ 6 ಗಂಟೆಯವರೆಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ 10 ಕಿ.ಮೀ ವ್ಯಾಪ್ತಿಯಲ್ಲಿ ಮೇ 4ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಮದ್ಯ ಮಾರಾಟ ಹಾಗೂ ಸರಬರಾಜು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande