
ವಿಜಯಪುರ, 02 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡುವ ಉದ್ದೇಶದಿಂದ ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆ ಜರುಗಿತು. ರಾಜ್ಯ ಹಕ್ಕು ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ್ ಎಸ್. ಹಾಗೂ ನಾರಾಯಣ ಚನ್ನಾಳ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಕಾರ್ಯಾಗಾರದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ಮಹತ್ವ, ಸಾರ್ವಜನಿಕರಿಗೆ ಮಾಹಿತಿ ನೀಡುವ ಪ್ರಕ್ರಿಯೆ, ಅರ್ಜಿಗಳ ವಿಲೇವಾರಿ ವಿಧಾನ ಹಾಗೂ ಕಾನೂನುಬದ್ಧ ಜವಾಬ್ದಾರಿಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳಲ್ಲಿನ ಅನುಭವಗಳನ್ನು ಹಂಚಿಕೊಂಡು, ಸಮಸ್ಯೆಗಳು ಹಾಗೂ ಪರಿಹಾರ ಮಾರ್ಗಗಳ ಬಗ್ಗೆ ಚರ್ಚಿಸಿದರು. ಮಾಹಿತಿ ಹಕ್ಕು ಕಾಯ್ದೆಯಡಿ ಬಂದ ಅರ್ಜಿಗಳನ್ನು ಸಮಯಮಿತಿಯಲ್ಲಿ ಮತ್ತು ಪಾರದರ್ಶಕವಾಗಿ ನಿರ್ವಹಿಸುವಂತೆ ಆಯುಕ್ತರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ., ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕ ಅಶೋಕ ಕಲಘಟಗಿ ಸೇರಿದಂತೆ ಜಿಲ್ಲೆಯ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಸಭೆಯ ಅಂತ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ಜನಸಾಮಾನ್ಯರಿಗೆ ಇನ್ನಷ್ಟು ಸಮೀಪಿಸುವಂತೆ, ಅರ್ಜಿಗಳ ತ್ವರಿತ ವಿಲೇವಾರಿ ಹಾಗೂ ಪಾರದರ್ಶಕ ಆಡಳಿತವನ್ನು ಬಲಪಡಿಸುವ ಕುರಿತು ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande