ಘನ ತ್ಯಾಜ್ಯ ನಿರ್ವಹಣೆ ಪರಿಣಾಮಕಾರಿ ಜಾರಿಗೆ ಕ್ರಮ ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ಗದಗ, 20 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026 ಅನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ಜ
ಫೋಟೋ


ಗದಗ, 20 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026 ಅನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026 ಅನುಷ್ಟಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಜಾರಿಗೆ ತಂದಿದ್ದು, ಈ ನಿಯಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲೆಯ ಎಲ್ಲ ಮನೆಗಳು, ಸಾರ್ವಜನಿಕ ಸಂಸ್ಥೆಗಳು, ವ್ಯಾಪಾರೋದ್ಯಮಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಸವನ್ನು ಕಡ್ಡಾಯವಾಗಿ ನಾಲ್ಕು ವಿಭಾಗಗಳಾಗಿ ವಿಂಗಡಿಸಿ ನಗರಸಭೆ ಅಥವಾ ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹಣಾ ವಾಹನಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಹೊಸ ನಿಯಮಗಳ ಅನ್ವಯ ಕಸವನ್ನು ಹಸಿ ತ್ಯಾಜ್ಯ, ಒಣ ತ್ಯಾಜ್ಯ, ಸ್ಯಾನಿಟರಿ ತ್ಯಾಜ್ಯ ಮತ್ತು ವಿಶೇಷ ಕಾಳಜಿ ತ್ಯಾಜ್ಯ ಎಂಬ ನಾಲ್ಕು ಪ್ರತ್ಯೇಕ ವಿಭಾಗಗಳಾಗಿ ಬೇರ್ಪಡಿಸುವುದು ಕಡ್ಡಾಯವಾಗಿದೆ ಎಂದು ಅವರು ವಿವರಿಸಿದರು.

ಅಡುಗೆ ಮನೆಯಿಂದ ಹೊರಬರುವ ಆಹಾರ ತ್ಯಾಜ್ಯ, ತರಕಾರಿ, ಹಣ್ಣು, ಹೂವು, ಮಾಂಸದ ಅವಶೇಷ ಹಾಗೂ ಬೇಗ ಕೊಳೆಯುವ ವಸ್ತುಗಳನ್ನು ಹಸಿ ತ್ಯಾಜ್ಯ ವಿಭಾಗದಲ್ಲಿ ಸೇರಿಸಬೇಕು. ಪ್ಲಾಸ್ಟಿಕ್, ಬಟ್ಟೆ, ಮರದ ವಸ್ತುಗಳು, ಕಬ್ಬಿಣ, ರಬ್ಬರ್ ಸೇರಿದಂತೆ ಮರುಬಳಕೆ ಸಾಧ್ಯವಿರುವ ವಸ್ತುಗಳನ್ನು ಒಣ ತ್ಯಾಜ್ಯ ವಿಭಾಗದಲ್ಲಿ ವಿಂಗಡಿಸಬೇಕು ಎಂದು ತಿಳಿಸಿದರು.

ಇನ್ನು ಡೈಪರ್, ಸ್ಯಾನಿಟರಿ ನ್ಯಾಪಕಿನ್ಗಳು ಸೇರಿದಂತೆ ಆರೋಗ್ಯ ಸಂಬಂಧಿತ ಬಳಕೆಯ ವಸ್ತುಗಳನ್ನು ಸ್ಯಾನಿಟರಿ ತ್ಯಾಜ್ಯ ಎಂದು ಪ್ರತ್ಯೇಕವಾಗಿ ನೀಡಬೇಕು. ಪೇಂಟ್ ಡಬ್ಬಿಗಳು, ಔಷಧ ಬಾಟಲಿಗಳು, ಇ-ವೇಸ್ಟ್, ಹಳೆಯ ಬ್ಯಾಟರಿಗಳು, ಬಲ್ಬ್ಗಳು, ಬಳಸಿದ ಸಿರಿಂಜ್, ಬ್ಯಾಂಡೇಜ್ಗಳಂತಹ ಅಪಾಯಕಾರಿ ವಸ್ತುಗಳನ್ನು ವಿಶೇಷ ಕಾಳಜಿ ತ್ಯಾಜ್ಯ ವಿಭಾಗದಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಿದರು.

ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಕಸ ಉತ್ಪಾದಿಸುವ ಸಂಸ್ಥೆಗಳ ಗುರುತಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ದಿನಕ್ಕೆ 100 ಕೆಜಿಗೂ ಹೆಚ್ಚು ಕಸ ಉತ್ಪಾದಿಸುವ, ಅಥವಾ ಪ್ರತಿದಿನ 40 ಸಾವಿರ ಲೀಟರ್ಗಿಂತ ಹೆಚ್ಚು ನೀರು ಬಳಕೆ ಮಾಡುವ, ಅಥವಾ 20 ಸಾವಿರ ಚದರ ಮೀಟರ್ಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಸಂಸ್ಥೆಗಳು ಈ ನಿಯಮದ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದರು.

ಈ ವರ್ಗಕ್ಕೆ ಒಳಪಡುವ ಹಾಸ್ಟೆಲ್ಗಳು, ಶಾಪಿಂಗ್ ಮಾಲ್ಗಳು, ರೆಸ್ಟೋರೆಂಟ್ಗಳು, ಕಲ್ಯಾಣ ಮಂಟಪಗಳು, ಅಪಾರ್ಟ್ಮೆಂಟ್ಗಳು ಹಾಗೂ ಇತರೆ ದೊಡ್ಡ ಸಂಸ್ಥೆಗಳು ಕಡ್ಡಾಯವಾಗಿ ಗುರುತಿಸಿ ಸರ್ಕಾರದ ವೆಬ್ಪೋರ್ಟಲ್ನಲ್ಲಿ ನೋಂದಣಿ ಮಾಡಿಸಬೇಕು. ಜೊತೆಗೆ ಅವರಿಗೆ ಹೊಸ ನಿಯಮಗಳು, ಕಸ ವಿಂಗಡಣೆ ಹಾಗೂ ವೈಜ್ಞಾನಿಕ ವಿಲೇವಾರಿ ಕುರಿತು ಸಮರ್ಪಕ ಮಾಹಿತಿ ಮತ್ತು ತರಬೇತಿ ನೀಡಬೇಕು ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಆರೋಗ್ಯ ಇಲಾಖೆ, ಪರಿಸರ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ನಿಯಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮುನ್ನೆಚ್ಚರಿಕೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ ಮಾತನಾಡಿ, ಘನ ತ್ಯಾಜ್ಯ ನಿರ್ವಹಣಾ ನಿಯಮಗಳು–2026 ಈಗಾಗಲೇ ಏಪ್ರಿಲ್ 1ರಿಂದ ಜಾರಿಗೆ ಬಂದಿವೆ ಎಂದು ತಿಳಿಸಿದರು.

ಸೆಪ್ಟೆಂಬರ್ 30, 2026ರೊಳಗೆ ಎಲ್ಲಾ ರಾಜ್ಯಗಳು ಹಾಗೂ ಸ್ಥಳೀಯ ಸಂಸ್ಥೆಗಳು ತಮ್ಮದೇ ಆದ ರಾಜ್ಯ ನೀತಿ ರೂಪಿಸಿ ಅಂತಿಮಗೊಳಿಸಬೇಕಾಗಿದೆ. ಅಕ್ಟೋಬರ್ 30, 2026ರೊಳಗೆ ನಗರ ಪ್ರದೇಶಗಳಲ್ಲಿರುವ ಹಳೆಯ ಕಸದ ರಾಶಿಗಳ ನಿರ್ವಹಣೆಯನ್ನು ಭೌಗೋಳಿಕ ಮ್ಯಾಪಿಂಗ್ ಮೂಲಕ ಪೂರ್ಣಗೊಳಿಸಬೇಕಾಗಿದೆ ಎಂದು ಹೇಳಿದರು.

ಇದೇ ರೀತಿ ಅಕ್ಟೋಬರ್ 31, 2027ರೊಳಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕಸ ನಿರ್ವಹಣೆಗೆ ಸಂಬಂಧಿಸಿದ ಉಪ ಕಾಯ್ದೆಗಳನ್ನು ಕಡ್ಡಾಯವಾಗಿ ಜಾರಿಗೆ ತರಬೇಕು ಎಂದು ಅವರು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಚಳಗೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಲೋಹಿತ್ಕುಮಾರ್ ಪಿ.ಜೆ., ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಗದಗ-ಬೆಟಗೇರಿ ನಗರಸಭೆಯ ಕಾರ್ಯಕಾರಿ ಅಭಿಯಂತರ (ಪರಿಸರ) ಆನಂದ ಬದಿ, ಎಸ್ಡಬ್ಲ್ಯೂಎಂ ತಜ್ಞ ಕೊಟ್ರೇಶ್, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಆರೋಗ್ಯ ನಿರೀಕ್ಷಕರು ಹಾಗೂ ಆರೋಗ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande